ಬೆಂಗಳೂರು/ ಬೆಳಗಾವಿ: ಯಾದಗಿರಿ ಸೇರಿದಂತೆ ರಾಜ್ಯದ ಯಾವುದೇ ಕಡೆಗಳಲ್ಲಿ ಬಾಲ್ಯವಿವಾಹಗಳು ಜರುಗದಂತೆ ಕಾನೂನು ಬಿಗಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಿಷೇಧಿತ ಬಾಲ್ಯ ವಿವಾಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಸಹ ಅವರನ್ನು ರಕ್ಷಿಸುವ ಪ್ರಮೇಯವೇ ಇಲ್ಲ. ತಪ್ಪಿತಸ್ಥರನ್ನು ಯಾವುದೇ ಮುಲಾಜಿಲ್ಲದೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.
ಯಾದಗಿರಿ ಜಿಲ್ಲೆಯಲ್ಲಿ 2020-2021ರ ಅವಧಿಯಲ್ಲಿ 1 ಪ್ರಕರಣ, 2021-22ರಲ್ಲಿ 9 ಹಾಗೂ 2022-23ರಲ್ಲಿ 2 ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಬಾಲ್ಯ ವಿವಾಹ ಸಮಾಜಕ್ಕೆ ಮಾರಕವಾಗಿ ಪರಿಣಮಿಸಿದೆ. ಬಾಲ್ಯ ವಿವಾಹದಿಂದ ಮುಂದೆ ಆಗುವ ದುಷ್ಪರಿಣಾಮಗಳೇನು ಎಂಬುದರ ಬಗ್ಗೆ ಸಾರ್ವಜನಿಕರು ಅರಿಯಬೇಕು. ಜೊತೆಗೆ ಕಾನೂನು ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತಿತರ ಸಂಬಂಧಿಸಿದ ಇಲಾಖೆಗಳು ಕಾರ್ಯಪ್ರವೃತ್ತವಾಗಿದೆ. ಇದರ ಜೊತೆಗೆ ಸ್ಟೇಟ್ ಕ್ರೈಮ್ ರೆಕಾರ್ಡ್ ಬ್ಯೂರೋ, ಬಾಲ್ಯ ವಿವಾಹ ನಿಷೇಧ ಕೋಶ ಇತ್ಯಾದಿ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಇವುಗಳ ಮೇಲುಸ್ತುವಾರಿ ಹಾಗೂ ದಾಖಲಾಗುವ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳುತ್ತಿದೆ ಎಂದು ತಿಳಿಸಿದರು.