ಬೆಳಗಾವಿ: ಜಿಲ್ಲೆಯ ಐದು ಕ್ಷೇತ್ರ ಸೇರಿ ಬಾಕಿ ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಅಂತಿಮ ಪಟ್ಟಿ ಇಂದು ಬಹುತೇಕ ಬಿಡುಗಡೆ ಆಗುತ್ತದೆ. ನಾನು ಪ್ರಚಾರ ಸಭೆ ಪ್ರಾರಂಭ ಮಾಡಿದ್ದೇನೆ. ಇವತ್ತು ಹಳಿಯಾಳ, ಕನಕಗಿರಿ, ಯಲಬುರ್ಗಾ ಕ್ಷೇತ್ರಕ್ಕೆ ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ಅವರಿಗೆ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಏನಾದರೂ ಕೊಡುತ್ತೀರಾ? ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೊಡುತ್ತಾರೆ. ಬೆಳಗಾವಿಯಲ್ಲಿ ಮತ್ತು ಬೇರೆ ಎಲ್ಲೆಲ್ಲಿ ಪ್ರಚಾರಕ್ಕೆ ಹೋಗುತ್ತೇವೆ ಅಂತಾರೋ ಅಲ್ಲೆಲ್ಲಾ ಕಳುಹಿಸಿ ಕೊಡುತ್ತೇವೆ ಎಂದು ಹೇಳಿದರು.
ಪ್ರಭಾವಿ ಲಿಂಗಾಯತ ನಾಯಕ ಪ್ರಭಾಕರ ಕೋರೆ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ? ಎಂಬ ಮಾತು ಕೇಳಿ ಬರುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅವರು ನನ್ನ ಜೊತೆ ಮಾತನಾಡಿಲ್ಲ. ಹಾಗೆಯೇ, ಬಿಜೆಪಿ ಶಾಸಕ ಅನಿಲ ಬೆನಕೆ ಕಾಂಗ್ರೆಸ್ ಸೇರ್ಪಡೆ ಬಗ್ಗೆಯೂ ನನಗೆ ಗೊತ್ತಿಲ್ಲ. ನನ್ನ ಜೊತೆ ಮಾತನಾಡದೇ ಏನೂ ಹೇಳಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಳಿಕ, ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ಬಳಿಕ ಕಿತ್ತೂರು, ನಿಪ್ಪಾಣಿಯಲ್ಲಿ ಬಂಡಾಯ ಎದ್ದಿರುವ ಅವರೆಲ್ಲರ ಜೊತೆ ಮಾತನಾಡಿದ್ದೇವೆ, ಅಶೋಕ ಪೂಜಾರಿ ಜೊತೆಗೂ ಮಾತಾಡಿದ್ದೇನೆ ಎಂದರು.
ಬೆಳಗಾವಿ ಜಿಲ್ಲೆಯ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 15ರಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದ್ದು, ಕಾಂಗ್ರೆಸ್ ಗಾಳಿ ಬೀಸುತ್ತಿದೆ. ಬಿಜೆಪಿ ವಿರುದ್ಧವಾದ ಅಲೆ ಇದೆ. ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ ಕ್ರಮಗಳಿಂದ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.