ಬೆಳಗಾವಿ :ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಇಂದಿಗೆ 3ನೇ ದಿನಕ್ಕೆ ಕಾಲಿರಿಸಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಕುಟುಂಬಸ್ಥರು ಸಾಥ್ ನೀಡುತ್ತಿದ್ದಾರೆ. ತಮ್ಮ ಮಕ್ಕಳನ್ನು ಭುಜದ ಮೇಲೆ ಕೂರಿಸಿಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಇಂದು ಮಧ್ಯರಾತ್ರಿ ಎಲ್ಲ ಸಾರಿಗೆ ನೌಕರರನ್ನು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸದಂತೆ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದರು.
ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರ ಎಚ್ಚರಿಕೆಗೆ ಕ್ಯಾರೇ ಎನ್ನದೆ ಕುಟುಂಬ ಸಮೇತರಾಗಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಸಾರಿಗೆ ನೌಕರರು ತಮ್ಮ ಮಕ್ಕಳನ್ನು ಭುಜದ ಮೇಲೆ ಕೂಡಿಸಿಕೊಂಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.