ಚಿಕ್ಕೋಡಿ:ಕೋವಿಡ್ ಸೋಂಕು ವ್ಯಾಪಕವಾಗಿ ಹರಡಲು ಕಾರಣರಾಗುತ್ತಿರುವ ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ತ್ವರಿತವಾಗಿ ಗುರುತಿಸಬೇಕು ಹಾಗೂ ಆಕ್ಸಿಜನ್ ಅಗತ್ಯವಿರುವ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಶುಕ್ರವಾರ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಾಗೂ ಲಕ್ಷಣರಹಿತ ಸೋಂಕಿತರ ಕ್ವಾರಂಟೈನ್ ಗೆ ಸಂಬಂಧಿಸಿದಂತೆ ಹುಕ್ಕೇರಿ ತಾಲೂಕಿನಲ್ಲಿ ಉತ್ತಮ ಕೆಲಸ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದೇ ಮಾದರಿಯಲ್ಲಿ ಇತರೆ ತಾಲೂಕುಗಳಲ್ಲಿ ಕೆಲಸ ಮಾಡುವ ಅಗತ್ಯವಿದೆ ಎಂದರು.