ಚಿಕ್ಕೋಡಿ:ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಎರಡನೆಯ ಪ್ರವಾಹಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ.
ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ: ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ - second flood
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ರಣಭೀಕರ ಮಳೆಯಿಂದಾಗಿ ಮತ್ತೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗಿದ್ದು, ಈಗಾಗಲೇ ಅನೇಕರು ಸಾವನ್ನಪ್ಪಿದ್ದಾರೆ.
ಕಳೆದೆರಡು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಮದರಸಾಬ್ ಮಕಾಂದಾರ ಎಂಬ ವ್ಯಕ್ತಿ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೊಗಿದ್ದರೆ, ಇದೀಗ ಅಥಣಿ ತಾಲೂಕಿನ ಜನವಾಡ ಗ್ರಾಮದಲ್ಲಿ ಶೋಭಾ ಬಾಳಪ್ಪ ಸುತಾರ (40) ಎಂಬ ಮಹಿಳೆ ಬಟ್ಟೆ ತೊಳೆಯಲು ಹೋದ ವೇಳೆ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಹಲವು ದಿನಗಳಿಂದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಶೋಭಾ ತಮ್ಮ ಮನೆ ಸ್ವಚ್ಚ ಮಾಡಿ ಪುನಃ ಬದುಕು ಕಟ್ಟಿಕೊಳ್ಳಲು ಪ್ರಾರಂಭಿಸಿದ್ದರು. ಮತ್ತೆ ಪ್ರವಾಹ ಬರಬಹುದೆಂದು ತಮ್ಮ ಮನೆಯ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುವಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಮತ್ತು ತಾಲ್ಲೂಕು ದಂಢಾಧಿಕಾರಿ ಎಂ.ಎನ್ ಬಳಿಗಾರ ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.