ಅಥಣಿ(ಬೆಳಗಾವಿ) :ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿರುವುದು ತೃಪ್ತಿ ತಂದಿದೆ. ಸಂಜೆ ವಿಜಯಪುರಕ್ಕೆ ಹೋಗಿ ಕೊಟ್ಟಿರುವ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.
ಹುಕ್ಕೇರಿ ತಾಲೂಕಿನ ಹುಲ್ಲೋಳಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಉಸ್ತುವಾರಿ ಜಿಲ್ಲೆ ಅಷ್ಟೇ ಬದಲಾಗಿದೆ. ಬೇರೆ ಏನೂ ಬದಲಾವಣೆ ಆಗಿಲ್ಲ. ಪಾಕಿಸ್ತಾನ ಹಾಗೂ ಬಾಂಗ್ಲಾದೇಶದಲ್ಲಿ ನನಗೆ ಉಸ್ತುವಾರಿ ಕೊಡಲು ಆಗುವುದಿಲ್ಲ.
ರಾಜ್ಯದಲ್ಲೇ ಉಸ್ತುವಾರಿ ಕೊಟ್ಟಿದ್ದಾರೆ. ಹೀಗಾಗಿ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಸಂತೋಷದಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
ಸಂಪುಟ ಪುನಾರಚನೆ, ವಿಸ್ತರಣೆ ಎಲ್ಲವೂ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ. ಇದು ಮಾಧ್ಯಮ ಸೃಷ್ಟಿ, ಪಂಚರಾಜ್ಯಗಳ ಚುನಾವಣೆ ಮುಗಿದ ಮೇಲೆ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಹೇಳಿದರು.