ಚಿಕ್ಕೋಡಿ: ಕರ್ನಾಟಕ - ಮಹಾರಾಷ್ಟ್ರ ರಾಜ್ಯಗಳು ನಾಲ್ಕು ಟಿಎಂಸಿ ಕುಡಿಯುವ ನೀರನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲು ತಾತ್ವಿಕವಾಗಿ ಒಪ್ಪಿಗೆ ನೀಡಿವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಮುಂಗಾರು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ನೀರಾವರಿ ಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗಿದೆ.
ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರ ರಾಜ್ಯದಿಂದ 4 ಟಿಎಂಸಿ ನೀರನ್ನು ಕೊಯ್ನಾ ಜಲಾಶಯದಿಂದ ಬಿಡುಗಡೆ ಮಾಡಲಾಗುವುದು. ಅದಕ್ಕೆ ಪ್ರತಿಯಾಗಿ ಕರ್ನಾಟದ ಆಲಮಟ್ಟಿ ಹಿನ್ನೀರಿನಿಂದ ಗಡಿಭಾಗದ ಜತ್ತ ತಾಲೂಕಿನ ಸುಮಾರು 40 ಹಳ್ಳಿಗಳಿಗೆ 4 ಟಿಎಂಸಿ ನೀರನ್ನು ನೀಡುವ ನಿರ್ಣಯ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ನೀರಾವರಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಚಿಕ್ಕೋಡಿಯಲ್ಲಿ ಪ್ರವಾಹ ನಿರ್ವಹಣೆಗೆ ಸಕಲ ವ್ಯವಸ್ಥೆ: ಚಿಕ್ಕೋಡಿಯಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯಿಂದ ಆಗುವ ಹಾನಿ ತಡೆಗಟ್ಟಲು, ಜನ ಹಾಗೂ ಜಾನುವಾರುಗಳಿಗೆ ನೆರವಾಗಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.