ಬೆಳಗಾವಿ: ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚನೆ ನೀಡಿದರು.
ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಾಕ್ಡೌನ್ ಬಳಿಕ ಬಹುತೇಕ ಅತಿಥಿಗೃಹಗಳು, ಹೋಟೆಲ್ ಮತ್ತಿತರ ಕಡೆಗಳಲ್ಲಿ ಕೊಠಡಿಗಳು ಹೆಚ್ಚಿನ ಬಳಕೆ ಆಗಿರುವುದಿಲ್ಲ. ಆದ್ದರಿಂದ ಪ್ರತಿಯೊಂದನ್ನು ಪರಿಶೀಲಿಸಿ ಸ್ವಚ್ಛತೆ ಮತ್ತು ಸ್ಯಾನಿಟೈಜೇಷನ್ ಕೆಲಸ ಆರಂಭಿಸಬೇಕು. ವಸತಿಗೆ ಸಂಬಂಧಿಸಿದಂತೆ ಕಳೆದ ಅಧಿವೇಶನಗಳ ಸಂದರ್ಭದಲ್ಲಿ ಎದುರಾಗಿರುವ ಅನಾನುಕೂಲತೆಗಳನ್ನು ಆಧರಿಸಿ ಅವುಗಳನ್ನು ನಿವಾರಿಸಲು ಮುಂಚಿತವಾಗಿ ಕ್ರಮ ಕೈಗೊಳ್ಳಬೇಕು.
ಸುರಕ್ಷತಾ ಕ್ರಮಗಳು, ಪಾರ್ಕಿಂಗ್ ವ್ಯವಸ್ಥೆ, ಮೊಬೈಲ್ ಹಾಗೂ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ತುರ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳು ಪೂರ್ವಭಾವಿ ಸಭೆಗಳನ್ನು ನಡೆಸಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.