ಬೆಳಗಾವಿ :ಹಣಬರ ಯಾದವ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಮುಂದಾಗಬೇಕೆಂದು ಆಗ್ರಹಿಸಿ ಹಣಬರ ಯಾದವ ಸಮಾಜ ಸಂಘಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಹಣಬರ ಯಾದವ ಸಮುದಾಯ ಎಲ್ಲಾ ರಂಗಗಳಲ್ಲೂ ಹಿಂದುಳಿದಿದೆ. ಇನ್ನು ರಾಜ್ಯದಲ್ಲಿ ಈ ಸಮುದಾಯವನ್ನು ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಹೈನುಗಾರಿಕೆಯನ್ನೇ ಮುಖ್ಯ ಕಸುಬನ್ನಾಗಿಸಿಕೊಂಡು ಜೀವನ ನಡೆಸುತ್ತಿರುವ ಈ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸೇರಿದಂತೆ ರಾಜಕೀಯ ರಂಗಗಳಲ್ಲಿಯೂ ಹಿಂದುಳಿದಿದೆ. ಹೀಗಾಗಿ ಈ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಇದರ ಜೊತೆಗೆ ವೀರರಾಣಿ ಕಿತ್ತೂರು ಚನ್ನಮ್ಮ ಸೈನ್ಯದಲ್ಲಿ ಅಧಿಕಾರಿಯಾಗಿದ್ದ ಅಮಟೂರು ಬಾಳಪ್ಪ ಅವರು, ಬ್ರಿಟಿಷ್ ವಿರುದ್ಧ ನಡೆದ ಹೋರಾಟದಲ್ಲಿ ಆಗಿನ ಗವರ್ನರ್ ಥ್ಯಾಕರೆ ಅವರನ್ನು ಹತ್ಯೆ ಮಾಡಿ ಶೂರ, ಧೀರನಾಗಿದ್ದ ಅಮಟೂರು ಬಾಳಪ್ಪನವರ ಹೆಸರನ್ನು ಬೆಳಗಾವಿಯಲ್ಲಿ ಯಾವುದಾದರೂ ವೃತ್ತಕ್ಕೆ ನಾಮಕರಣ ಮಾಡಬೇಕೆಂದು ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.