ಬೆಳಗಾವಿ: ಯೋಗದಿಂದ ಆರೋಗ್ಯ ತುಂಬಾ ಚೆನ್ನಾಗಿರುತ್ತದೆ. ಆದ್ದರಿಂದ ಯೋಗಾಭ್ಯಾಸವನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತರ ಆಶ್ರಯದಲ್ಲಿ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ "ವಸುದೈವ ಕುಟುಂಬಕಂ” ಹಾಗೂ “ಪ್ರತಿ ಅಂಗಳದಲ್ಲಿ ಯೋಗ” ಎಂಬ ಘೋಷವಾಕ್ಯದಡಿ ಯೋಗ ನಡಿಗೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ವಿಶ್ವ ಯೋಗ ದಿನಕ್ಕೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೆಸರು ತಂದು ಕೊಟ್ಟಿದ್ದು ಭಾರತ ಮತ್ತು ಭಾರತ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು. ಹೀಗಾಗಿ ನಾಳೆಯ ಯೋಗ ದಿನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಇಂದು ಯೋಗ ನಡಿಗೆ ಮಾಡುತ್ತಿದ್ದೇವೆ. ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯದ ಮಾರ್ಗವಾಗಿ ಒಪ್ಪಿಕೊಳ್ಳಲಾಗಿದೆ. ದೈನಂದಿನ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಒತ್ತಡ ನಿವಾರಣೆ ಕೂಡ ಇದರಿಂದ ಸಾಧ್ಯವಾಗಲಿದೆ ಎಂದರು.
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾದ ಯೋಗ ನಡಿಗೆಯು ಚೆನ್ನಮ್ಮ ವೃತ್ತದ ಮೂಲಕ ಸಾಗಿ ಜಿಲ್ಲಾ ಪಂಚಾಯತಿ ಕಾರ್ಯಾಲಯ ತಲುಪಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗದ ಮಹತ್ವ, ಉಪಯೋಗದ ಬಗ್ಗೆ ಅರಿವು ಮೂಡಿಸುವ ಸಂದೇಶ ಫಲಕಗಳನ್ನು ಪ್ರದರ್ಶಿಸಲಾಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿಗಳಾದ ಕೆ.ಟಿ. ಶಾಂತಲಾ, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿಗಳಾದ ಡಾ. ಶ್ರೀಕಾಂತ್ ಸುಣಧೋಳಿ ಹಾಗೂ ಮಹಿಳೆಯರು, ವಿವಿಧ ಇಲಾಖೆಯ ಅಧಿಕಾರಿಗಳು ನಡಿಗೆಯಲ್ಲಿ ಪಾಲ್ಗೊಂಡರು.