ವಿಜಯನಗರ: ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪ ತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ 100 ಕೋಟಿ ರೂ. ಮೀಸಲಿಟ್ಟಿದ್ದು, ಆ ಹಣವನ್ನು ಹಂತ-ಹಂತವಾಗಿ ಹಣಕಾಸು ಇಲಾಖೆ ಒದಗಿಸಲಿದೆ. ಇನ್ನೂ ಹೆಚ್ಚಿನ ಹಣ ಅವಶ್ಯವಿದ್ದಲ್ಲಿ ಸರಕಾರ ಒದಗಿಸಲಿದೆ ಎಂದು ತಿಳಿಸಿದರು. ಜುಲೈ 20 ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಟ್ಟಕ್ಕೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದೂ ಹೇಳಿದರು.