ಬಳ್ಳಾರಿ: ತುಂಗಭದ್ರಾ ಜಲಾಶಯಕ್ಕೆ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನೀರು ಸಂಗ್ರಹವಾಗಿದ್ದು, ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಜಲಾಶಯದ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅವಧಿಗೆ ಮುನ್ನವೇ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ. ಹೀಗಾಗಿ ಭತ್ತ ನಾಟಿಗೆ ಜಲಾಶಯದ ಅಚ್ಚುಕಟ್ಟು ಭಾಗದ ರೈತರು ಸಿದ್ಧತೆ ನಡೆಸಿದ್ದಾರೆ.
ಕರ್ನಾಟಕ ಹಾಗೂ ಆಂಧ್ರ ಪ್ರದೇಶದ ಕೆಲ ಜಿಲ್ಲೆಗಳ ರೈತರ ಪಾಲಿಗೆ ಈ ಜಲಾಶಯ ಜೀವನಾಡಿ. ಜಲಾಶಯದ ನೀರನ್ನೇ ಅವಲಂಬಿಸಿ ಅಚ್ಚುಕಟ್ಟು ಭಾಗದ ರೈತರು ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುತ್ತಾರೆ. ಕಳೆದ ವರ್ಷ ಕೂಡ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಮಳೆಗಾಲ ಮತ್ತು ಬೇಸಿಗೆ ಬೆಳೆಗೆ ಎರಡು ಅವಧಿಯಲ್ಲೂ ನೀರು ಲಭ್ಯವಾಗಿತ್ತು. ಈ ವರ್ಷ ಬೇಸಿಗೆ ಕಾಲದಲ್ಲೂ ಕೂಡ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರಲಿಲ್ಲ. ಈ ವರ್ಷವೂ ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ.