ಬಳ್ಳಾರಿ:ಬಳ್ಳಾರಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಸದಸ್ಯರ ರಾಜೀನಾಮೆ ಮುಂದುವರೆದಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟಿದ ಮೇಲೆ ಅವರ ಪಕ್ಷಕ್ಕೆ ಸೇರುವವರು ಬಿಜೆಪಿಗೆ ಒಬ್ಬೊಬ್ಬರಾಗೇ ರಾಜೀನಾಮೆ ಕೊಡಲು ಶುರು ಮಾಡಿದ್ದಾರೆ.
ಇಂದು ಬಿಜೆಪಿಯ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜೆ. ಚಂದ್ರ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರಿಗೌಡ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ನಿನ್ನೆ ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ಬೂಡಾ ಮಾಜಿ ಅಧ್ಯಕ್ಷ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೆ ಜೆ. ಚಂದ್ರ ಅವರು ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.