ಬಳ್ಳಾರಿ: ಜಿಲ್ಲಾ ಖನಿಜ ನಿಧಿ ಅಡಿ ಸರ್ಕಾರಿ ನೌಕರರಿಗಾಗಿ ವಸತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸರ್ಕಾರಿ ನೌಕರರ ಸಂಘದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಎಂಎಫ್ ಅಡಿ ಮೊದಲಿಗೆ ಜಿ+2 ಅಡಿ ಎಲ್ಲ ಸೌಕರ್ಯಗಳನ್ನು ಒಳಗೊಂಡ 50 ಮನೆಗಳನ್ನು ನಿರ್ಮಿಸಲಾಗುವುದು. ನಂತರ ಹಂತ ಹಂತವಾಗಿ ಪೂರ್ಣ ಪ್ರಮಾಣದಲ್ಲಿ ನಿರ್ಮಿಸಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.
ನೌಕರರಿಗಾಗಿ ರಿಯಾಯಿತಿ ದರದಲ್ಲಿ ಗೃಹಪಯೋಗಿ ವಸ್ತುಗಳ ಕ್ಯಾಂಟೀನ್ ಬಳ್ಳಾರಿಯಲ್ಲಿ ತೆರೆಯಬೇಕು. ಈಗಾಗಲೇ ದಾವಣಗೆರೆ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ತೆರೆಯಲಾಗಿದ್ದು, ಅದರಂತೆ ನಮ್ಮಲ್ಲಿಯೂ ಕ್ಯಾಂಟೀನ್ ಆರಂಭಿಸಿ ಅನುಕೂಲ ಮಾಡಿಕೊಡಬೇಕು ಎಂದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಶಿವಾಜಿರಾವ್ ಅವರ ಮನವಿಗೆ ಸ್ಪಂದಿಸಿದ ಡಿಸಿ ನಕುಲ್ ಅವರು, ಇದಕ್ಕೆ ಸಂಬಂಧಿಸಿದ ವರದಿ ನೀಡಿ, ಸಾಧ್ಯವಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಚೇರಿ ಕಡತಗಳ ನಿರ್ವಹಣೆ ಕುರಿತ 4(1) ಎ ಮತ್ತು 4(1)ಬಿ ಕುರಿತು ಸೂಕ್ತ ತರಬೇತಿಯನ್ನು ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಸರ್ವೋತ್ತಮ ಸೇವಾ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರನ್ನು ಆಯ್ಕೆ ಸಮಿತಿ ಸದಸ್ಯರನ್ನಾಗಿ ಮಾಡಲಾಗುವುದು ಎಂದರು.
ಇನ್ನು ಕೋವಿಡ್‍ನ ಸಂದರ್ಭದಲ್ಲಿ ಎಲ್ಲಯ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯುತ್ತಮವಾಗಿ ಕೆಲಸ ಮಾಡುವುದರ ಮೂಲಕ ಜಿಲ್ಲಾಡಳಿತಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.