ಹೊಸಪೇಟೆ: ಲಾಕ್ ಡೌನ್ ಸಂತ್ರಸ್ತರಿಗೆ ಪರಿಹಾರ ಹಾಗೂ ಆರ್ಥಿಕ ಪುನಶ್ಚೇತನಕ್ಕೆ ಪರ್ಯಾಯ ನೀತಿಗಳ ಮೂಲಕ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ತಾಲೂಕು ಸಮಿತಿ ನೇತೃತ್ವದಲ್ಲಿ ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.
ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ಲಾಕ್ಡೌನ್ ನಿಂದ ಆರ್ಥಿಕತೆಯು ಸಂಕಷ್ಟಕ್ಕೆ ಸಿಲುಕಿದೆ. ಅಸಂಘಟಿತ ವಲಯದ ಕೈಗಾರಿಕಾ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ರೈತಾಪಿ ವರ್ಗ ಹಾಗೂ ಸಾರ್ವಜನಿಕರ ಬದುಕು ಕಷ್ಟಕರವಾಗಿದೆ. ಅಲ್ಲದೇ, ಸಾಕಷ್ಟು ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಕೇಂದ್ರ ಸರಕಾರ ನೀಡಿದ್ದ ಆರ್ಥಿಕ ಪುನಶ್ಚೇತನಕ್ಕೆ ಅನುದಾನ ಜನರಿಗೆ ಸಮರ್ಪಕವಾಗಿ ದೊರೆಯಬೇಕು ಎಂದು ಆಗ್ರಹಿಸಿದರು.
ಸುಗ್ರೀವಾಜ್ಞೆ ಮೂಲಕ ಕಾರ್ಮಿಕರ ಕಾಯ್ದೆಗಳನ್ನು ತಿದ್ದುಪಡಿ ಮಾಡಲಾಗಿದ್ದು, ಇದನ್ನು ಕೂಡಲೇ ಹಿಂಪಡೆಯಬೇಕು. ಲಾಕ್ ಡೌನ್ ಸಂದರ್ಭದಲ್ಲಿ ಪೂರ್ಣವಾಗಿ ವೇತನವನ್ನು ನೀಡಿಲ್ಲ. ಹಾಗಾಗಿ ಸಂಪೂರ್ಣ ವೇತನವನ್ನು ನೀಡಬೇಕು. ಆರ್ಥಿಕ ಹಿಂಜರಿಕೆ ನೆಪದಲ್ಲಿ ಕಾರ್ಮಿಕರ ವಜಾ, ವರ್ಗಾವಣೆ, ವೇತನ ಒಪ್ಪಂದಲ್ಲಿನ ವೇತನ ಹೆಚ್ಚಳ ಮಂದೂಡಿಕೆ ಕ್ರಮಗಳನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಎಚ್. ವಿಶ್ವನಾಥ ಅವರಿಗೆ ಮನವಿ ಸಲ್ಲಿಸಿದರು. ಸಿಐಟಿಯುನ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಭಾಸ್ಕರ ರೆಡ್ಡಿ, ತಾಲೂಕು ಅಧ್ಯಕ್ಷೆ ಕೆ.ನಾಗರತ್ನಮ್ಮ, ಮುಖಂಡರಾದ ಯಲ್ಲಾಲಿಂಗ, ಬಿಸಾಟಿ ಮಹೇಶ, ಕೆ. ಎಂ. ಸಂತೋಷ ಇನ್ನಿತರರಿದ್ದರು.