ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ, ಬೆಂಗಳೂರಿನ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ದಪಡಿಸಲಾದ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಶನಿವಾರ ಬಿಡುಗಡೆಗೊಳಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಿಡುಗಡೆ ಮಾಡಿದ ಅವರು, ಅಸಂಘಟಿತ ಕಾರ್ಮಿಕರಿಗಾಗಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಕಾರ್ಮಿಕ ಇಲಾಖೆ ಮುಂದಾಗಿರುವುದು ಶ್ಲಾಘನೀಯ ಎಂದರು.
ಜಿಲ್ಲೆಯಲ್ಲಿ ವೈರಸ್ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜನಸಂದಣಿಯ ಪ್ರದೇಶದಿಂದ ದೂರವಿರಬೇಕು, ಶೀತ, ಕೆಮ್ಮು ಅಥವಾ ಫ್ಲೊನಂತಹ ಗುಣಲಕ್ಷಣಗಳಲಿರುವರೊಂದಿಗೆ 1 ಮೀಟರ್‌ನಷ್ಟು ಅಂತರವಿರಬೇಕು, ಸೀನುವಾಗ ಮೂಗು ಮತ್ತು ಬಾಯಿಯನ್ನು ಕರವಸ್ತ್ರ, ಟಿಶ್ಯೂವಿನಿಂದ ಮುಚ್ಚಿಕೊಳ್ಳಬೇಕು, ಸೋಪು ಹಚ್ಚಿ ಆಗಾಗ ಕೈತೊಳೆದುಕೊಳ್ಳಬೇಕು ಅಥವಾ ಸ್ಯಾನಿಟೈಸರ್ ಬಳಸಿ ಕೈ ಸ್ವಚ್ಛ ಮಾಡಿಕೊಳ್ಳಬೇಕು, ರೋಗದ ಲಕ್ಷಣಗಳು ಕಾಣಿಸಿಕೊಂಡಲ್ಲಿ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದರು.