ಬಳ್ಳಾರಿ:ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ವಿದ್ಯಾರ್ಥಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆ ವಿದ್ಯಾರ್ಥಿ ಪರೀಕ್ಷೆ ಬರೆದ ವಿಸ್ಡಮ್ ಲ್ಯಾಂಡ್ ಶಾಲೆಯ ಪರೀಕ್ಷಾ ಕೇಂದ್ರವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿ ಪರೀಕ್ಷೆ ಬರೆದ ಕೊಠಡಿಯ ಎಲ್ಲಾ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ಒದಗಿಸಿ, ಅವರಿಗೆ 6 ಅಡಿ ಅಂತರದಂತೆ (ಒಂದು ಬೆಂಚ್ ಗೆ ಒಬ್ಬರಂತೆ) ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಆ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಿಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ನಾಳೆ ಬೆಳಗ್ಗೆಯೂ ಇನ್ನೊಂದು ಬಾರಿ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ತಿಳಿಸಿದರು.
ಜೂ.25 ರಂದು ಇಂಗ್ಲೀಷ್ ಪರೀಕ್ಷೆ ಬರೆದು ಕಪಗಲ್ಲು ಗ್ರಾಮಕ್ಕೆ ಮೂರು ಜನ ಸ್ನೇಹಿತರೊಂದಿಗೆ ಬೈಕ್ ನಲ್ಲಿ ತೆರಳುವ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಕಾರಣ ವಿದ್ಯಾರ್ಥಿಗಳನ್ನು ವಿಮ್ಸ್ ಗೆ ದಾಖಲಿಸಲಾಗಿತ್ತು.
ಮೂರು ಜನರಲ್ಲಿ ಇಬ್ಬರಿಗೆ ಮೂಳೆ ಮುರಿದ ಕಾರಣ ವಿಮ್ಸ್ ನಲ್ಲಿ ಒಳರೋಗಿಗಳಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೇ ಸಂದರ್ಭದಲ್ಲಿ ಅವರ ಸ್ವಾಬ್ ಕಲೆಕ್ಟ್ ಮಾಡಿ ಟೆಸ್ಟ್ ಗೆ ಕಳಿಸಲಾಗಿತ್ತು.
ಸದ್ಯ ಇಬ್ಬರಲ್ಲಿ ಒಬ್ಬ ವಿದ್ಯಾರ್ಥಿಯ ವರದಿ ಪಾಸಿಟಿವ್ ಬಂದಿದೆ. ಇಬ್ಬರಲ್ಲಿ ಒಬ್ಬರಿಗೆ ಮಾತ್ರ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕೊರೊನಾ ಸೋಂಕು ಹರಡಿರುವ ಸಾಧ್ಯತೆ ತೀರಾ ಕಡಿಮೆ ಇದೆ. ಅದಾಗಿಯೂ ಜಿಲ್ಲಾಡಳಿತವು ಶಿಕ್ಷಣ ಇಲಾಖೆಯ ಸುತ್ತೋಲೆ ಮತ್ತು ಸರ್ಕಾರದ ಮಾರ್ಗಸೂಚಿಗಳ ಅನುಸಾರ ಅಗತ್ಯ ಎಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಇನ್ನೂ ಈ ಮೂರು ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಗಳಿಗೆ ಹಾಜರಾಗುವುದಿಲ್ಲ, ಅವರಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಎಸ್ಒಪಿ ನಿಯಮಗಳ ಅನುಸಾರ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ರೀತಿಯ ಆತಂಕ ಬೇಡ. ವಿದ್ಯಾರ್ಥಿಗಳು ನಿರಾತಂಕವಾಗಿ ಬಂದು ಪರೀಕ್ಷೆ ಬರೆಯಬೇಕು ಎಂದು ಡಿಸಿ ಮನವಿ ಮಾಡಿದರು.