ಬಳ್ಳಾರಿ: ರಾಜ್ಯದ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಅಂದಾಜು 50 ಬೆಡ್ಗಳನ್ನ ಮೀಸಲಿಡಲು ಸೂಚನೆ ನೀಡಲಾಗಿತ್ತು. ಆದರೆ, ಕೆಲ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಒಡಂಬಡಿಕೆಯ ಪ್ರಕಾರ ಖಾಸಗಿ ಆಸ್ಪತ್ರೆಗಳು ಅಂದಾಜು 50 ಬೆಡ್ಗಳನ್ನ ಕೋವಿಡ್ ಸೋಂಕಿತರಿಗೆ ಮೀಸಲಿರಿಸಬೇಕೆಂಬ ಆದೇಶವಿದೆ. ಹಲವು ಖಾಸಗಿ ಆಸ್ಪತ್ರೆಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿವೆ. ಕೆಲ ಖಾಸಗಿ ಆಸ್ಪತ್ರೆಗಳು ಮಾತ್ರ ರಾಜ್ಯ ಸರ್ಕಾರದ ಒಡಂಬಡಿಕೆಯನ್ನ ಪಾಲಿಸುತ್ತಿಲ್ಲ. ಹೀಗಾಗಿ, ಅಂತಹ ಖಾಸಗಿ ಆಸ್ಪತ್ರೆಗಳನ್ನ ಗುರುತಿಸಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ.