ಬಳ್ಳಾರಿ: ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಂತಹ ಮಹಿಳೆಯರನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಸ್ತ್ರೀಯರಿಗೆ ಸಮಾನವಾದ ಅವಕಾಶಗಳನ್ನು ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪಾತ್ರ ಅತ್ಯಂತ ಪ್ರಮುಖವಾದದ್ದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರದ ವಿಭಾಗದ ಮುಖ್ಯಸ್ಥ ಬಿ. ವಿಜಯ ಕುಮಾರ್ ಅವರು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ವಿದ್ಯಾಲಯದ ಆವರಣದಲ್ಲಿ, ಸೋಮವಾರ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಓದು ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಮನೆಯನ್ನು ಬಿಟ್ಟು ಸಮಾಜದ ಮುನ್ನೆಲೆಗೆ ಬರಬೇಕಾದರೆ ಶಿಕ್ಷಣ ತುಂಬಾ ಮುಖ್ಯ. ಶಿಕ್ಷಣದಿಂದ ಮಾತ್ರ ಮಹಿಳೆಯ ಅಭಿವೃದ್ಧಿ ಸಾಧ್ಯವೆಂದು ತಿಳಿದಿದ್ದ ಅಂಬೇಡ್ಕರ್ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದರ ಫಲವಾಗಿ ಇಂದು ಹಲವಾರು ಜನ ಹೆಣ್ಣು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದರು.