ಬಳ್ಳಾರಿ: ರಾಜ್ಯ ಬಿಜೆಪಿ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯ ಸುಗ್ರೀವಾಜ್ಞೆ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗಹ್ರಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರು ನಗರದ ಬೆಂಗಳೂರು ರಸ್ತೆಯ ಕೈಗಾರಿಕಾ ಪ್ರದೇಶದ ಸಮೀಪ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ - ಬಳ್ಳಾರಿಯಲ್ಲಿ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬಳ್ಳಾರಿ ನಗರದ ಹೊರವಲಯದಲ್ಲಿ ರಸ್ತೆ ತಡೆ ನಡೆಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿತು.
ಸಂಸದೀಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಜನತೆಯ ವಿರೋಧವನ್ನು ಲೆಕ್ಕಿಸದೆ ಕಾರ್ಪೋರೇಟ್ ಕಂಪನಿಗಳಿಗೆ ಕೃಷಿ ಭೂಮಿಯನ್ನು ಧಾರೆ ಎರೆಯಲು ಸುಗ್ರೀವಾಜ್ಞೆ ಹೊರಡಿಸಿರುವ ಬಿಜೆಪಿ ರಾಜ್ಯ ಸರ್ಕಾರದ ಕ್ರಮವನ್ನು ಸಮಿತಿ ಉಗ್ರವಾಗಿ ಖಂಡಿಸುತ್ತದೆ. ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ರೈತರು, ಕೃಷಿ ಕೂಲಿಕಾರರಿಗೆ ಸ್ಪಂದಿಸದೆ, ಕೃಷಿ ಉತ್ಪಾದನೆ, ಕೃಷಿ ಮಾರುಕಟ್ಟೆ, ಚಿಲ್ಲರೆ ವ್ಯಾಪಾರ, ವಿದ್ಯುತ್ ಕ್ಷೇತ್ರವನ್ನು ಕಾರ್ಪೋರೇಟ್ ಕಂಪನಿಗಳಿಗೆ ಒಪ್ಪಿಸಲು ನಾಲ್ಕು ಹೊಸ ಕಾಯ್ದೆಗಳನ್ನು ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರಕ್ಕೆ ತನ್ನನ್ನು ಅಧಿಕಾರಕ್ಕೆ ತಂದ ಸಾಮಾನ್ಯ ರೈತರಿಗಿಂತ ಅದಾನಿ, ಅಂಬಾನಿಗಳ ಹಿತವೇ ಮುಖ್ಯ ಎಂಬುದನ್ನ ಈ ಕಾಯ್ದೆಗಳು ಸಾಬೀತುಪಡಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.