ಬಳ್ಳಾರಿ: ಹತಾಶೆಯ ಮನೋಭಾವನೆಯಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ ಯತ್ನಾಳ್ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ಹೀನಾಯ ಸೋಲಾಗಲಿದೆ. ಈ ಭಯದಿಂದ ಆ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ದುರ್ಬಲವಾಗುವ ಪ್ರಶ್ನೆ ಇಲ್ಲ. ನಮ್ಮ ನಾಯಕತ್ವ ನಮ್ಮ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಬಂದರೆ ಅದರಲ್ಲಿ ತಪ್ಪೇನು?. ನಾವು ಬಿಜೆಪಿಗರ ರೀತಿ ಆಪರೇಷನ್ ಕಮಲ ಮಾಡಿಲ್ಲ. ಆಪರೇಷನ್ ಹಸ್ತ ಮಾಡುವ ಅಗತ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಯಾರಾದರೂ ಸ್ವಯಂ ಇಚ್ಛೆಯಿಂದ ಪಕ್ಷಕ್ಕೆ ಬರುವುದಾಗಿ ಹೇಳಿದರೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಲಾಟರಿ ಮೂಲಕ ಸರ್ಕಾರ ಬಂದಿದೆ ಎಂಬ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ಪ್ರತಿಕ್ರಿಯಿಸಿದ ಅವರು, ಶ್ರೀರಾಮುಲು ಅವರ ಒಳ ಮನಸ್ಸಿನಲ್ಲೇ ಕಾಂಗ್ರೆಸ್ ಸೇರ್ಪಡೆ ಆಗಬೇಕೆಂಬ ಆಸೆ ಇದೆ ಎಂದು ಹೇಳಿದರು.
ಅರಣ್ಯ ಸಚಿವರಾಗಿ ಮೊದಲ ಬಾರಿಗೆ ಬಳ್ಳಾರಿಗೆ ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ಎರಡೂ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಈಗಾಗಲೇ ಮಾಡಿದ್ದೇನೆ. ಇಂದು ಕೂಡ ಸಭೆ ನಡೆಸಲಾಗಿದೆ. ಅರಣ್ಯ ಸಂರಕ್ಷಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಇಂದು ನಾವು ಹಮ್ಮಿಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.