ಬಳ್ಳಾರಿ: ಒಳಚರಂಡಿ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಕೆಲ ದಿನಗಳಿಂದ ಮಹಾನಗರ ಪಾಲಿಕೆ ಎದುರು ನಡೆಸುತ್ತಿದ್ದ ಪ್ರತಿಭಟನೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರ ಮಧ್ಯಪ್ರವೇಶ ಹಾಗೂ ಭರವಸೆಯಿಂದ ಇಂದು ಅಂತ್ಯವಾಗಿದೆ.
ಒಳಚರಂಡಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವುದಾಗಿ ತಿಳಿಸಿದ್ದರಿಂದ ಧರಣಿ ಅಂತ್ಯಗೊಳಿಸಿದ್ದಾರೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ತಿಳಿಸಿದರು.
ಒಳಚರಂಡಿ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಗುತ್ತಿಗೆ ಪದ್ಧತಿ ರದ್ದು ಪಡಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಬೆಳಗಿನ ಉಪಹಾರ ಭತ್ಯೆ ನೀಡಬೇಕು. ಕಾರ್ಮಿಕರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು. ಮಹಾನಗರ ಪಾಲಿಕೆ ವತಿಯಿಂದ ಗುರುತಿನ ಚೀಟಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.
ಬಳ್ಳಾರಿ ಒಳಚರಂಡಿ ಕಾರ್ಮಿಕ ಸಂಘದವರು ಕಳೆದ 5 ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಇದರಿಂದ ನಗರದ ಜನತೆಗೆ ತೊಂದರೆ ಆಗುತ್ತಿರುವುದು ಶಾಸಕರ ಗಮನಕ್ಕೆ ಬಂದ ಹಿನ್ನೆಲೆ ಶನಿವಾರ ಒಳಚರಂಡಿ ಕಾರ್ಮಿಕರನ್ನು ಹಾಗೂ ಅಧಿಕಾರಿಗಳನ್ನು ಕರೆಸಿ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು.