ಬಳ್ಳಾರಿ: ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಈ ಘಟಕಗಳಿಗೆ ಸಂಬಂಧಿಸಿದಂತೆ ಅಮೂಲಾಗ್ರ ತನಿಖೆಗೆ ಆದೇಶಿಸಲಾಗಿದ್ದು, ಈ ತನಿಖಾ ತಂಡ ಬಳ್ಳಾರಿ ಜಿಲ್ಲೆಗೂ 15 ದಿನಗಳಲ್ಲಿ ಭೇಟಿ ನೀಡಿ, ಪರಿಶೀಲಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಶುದ್ಧ ಕುಡಿಯುವ ನೀರಿನ ಘಟಕಗಳು ಎಲ್ಲೆಲ್ಲಿ ಇವೆ, ಯಾವ ರೀತಿ ಕಾರ್ಯನಿರ್ವಹಿಸುತ್ತಿವೆ, ಯಾವ ಏಜೆನ್ಸಿ ನಿರ್ವಹಿಸುತ್ತಿದೆ. ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಜನರಿಗೆ ಲಭ್ಯವಾಗುತ್ತಿದೆಯೇ ಎಂಬುದರ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ. ಪರಿಶೀಲನೆಯ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗಿನ ಫೋಟೊ ಸಹ ಪಡೆಯುವಂತೆ ತಿಳಿಸಲಾಗಿದೆ. ಸಮಗ್ರ ವರದಿ ಬಂದ ನಂತರ ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಳ್ಳಾರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಮತ್ತು ನಿರ್ವಹಣೆ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲಾಗುವುದು. ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಟೆಂಡರ್ ಕರೆಯಲಾಗಿದೆ.ಬಳ್ಳಾರಿ ಜಿಲ್ಲೆಯಲ್ಲಿ ಒಂದೆಡೆ ನೆರೆ ಮತ್ತು ಬರವಿದ್ದರೂ ಅಧಿಕಾರಿಗಳು ಅತ್ಯಂತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿಯಾಗಿದೆ ಎಂದು ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಸೆ. 8, 9ರಂದು ಜಿ.ಪಂ ಸಿಇಒಗಳ ಸಭೆ:
ಇದೇ ಸೆ.8 ಮತ್ತು 9ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಜಿ.ಪಂ ಸಿಇಒಗಳ ಹಾಗೂ ರಾಜ್ಯಮಟ್ಟದ ಉನ್ನತ ಅಧಿಕಾರಿಗಳ ಸಭೆ ಏರ್ಪಡಿಸಲಾಗಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲೆಗಳಲ್ಲಿರುವ ಸಮಸ್ಯೆಗಳು ಮತ್ತು ಪರಿಹಾರ, ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಜನರಿಗೆ ಉಪಯುಕ್ತವಾಗುವ ಇನ್ನಿತರ ಕ್ರಮಗಳ ಕುರಿತು ಚರ್ಚಿಸಲಾಗುತ್ತದೆ. ಅಲ್ಲದೆ ಸೆ.9ರಂದು ಅಧಿಕಾರಿಗಳ ಜತೆಗೆ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸಭೆಯೂ ಏರ್ಪಡಿಸಲಾಗಿದೆ ಎಂದರು.
ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿ ಇಲಾಖೆಯ ಪ್ರಗತಿ ಪರಿಶೀಲಿಸಿದ್ದೇನೆ. ಉಳಿದ ಜಿಲ್ಲೆಗಳಿಗೂ ಭೇಟಿ ನೀಡಿ ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.
ಇದಕ್ಕೂ ಮುಂಚೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಈಶ್ವರಪ್ಪ, ನರೇಗಾ ಅಡಿ ಕೃಷಿ ಹೊಂಡ, ಬದು ನಿರ್ಮಾಣ ಮತ್ತು ತೋಟಗಾರಿಕೆಗೆ ಒತ್ತು ನೀಡಿ. ಇದರಿಂದ ವೈಯಕ್ತಿಕವಾಗಿ ರೈತರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರು, ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.
ಈ ಸಮಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಸಂಸದ ದೇವೇಂದ್ರಪ್ಪ, ಜಿ.ಪಂ. ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಉಪಾಧ್ಯಕ್ಷ ಪಿ.ದೀನಾ ಮಂಜುನಾಥ, ಜಿ.ಪಂ. ಸಿಇಒ ಕೆ.ನಿತೀಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ವಿಶೇಷ ಅಧಿಕಾರಿ ಜಯರಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿ.ಪಂ.ನ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.