ಬಳ್ಳಾರಿ: ಮಹಾಮಾರಿ ಕೊರೊನಾ ಎರಡನೇ ಅಲೆಯ ಪ್ರಮಾಣ ಹೆಚ್ಚಳವಾಗುತ್ತಿದ್ದು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳು ಇದೀಗ ರೆಡ್ ಅಲರ್ಟ್ನಲ್ಲಿವೆ. ಉಭಯ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ಶೇ. 47 ರಷ್ಟಿದೆ.
ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ನೇತೃತ್ವದಲ್ಲಿ ಮುಖ್ಯಮಂತ್ರಿ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಯಿತು. ಈ ವೇಳೆ ಅಧಿಕಾರಿಗಳು ಜಿಲ್ಲೆಯ ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆನಂದಸಿಂಗ್, ಇನ್ಮುಂದೆ ವಾರದಲ್ಲಿ ಮೂರು ದಿನಗಳ ಅವಧಿಗೆ ಲಾಕ್ ಡೌನ್ ಸಡಿಲಿಕೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಯಾಕಂದ್ರೆ ಸಾಧಕ-ಬಾಧಕ ನೋಡಿಕೊಂಡು ತೀರ್ಮಾನಿಸಿದ್ರೆ ಸೂಕ್ತ ಎಂಬ ಅಭಿಪ್ರಾಯ ಬಂದಿದ್ದು ಸದ್ಯದ ಮಟ್ಟಿಗೆ ಯಥಾಸ್ಥಿತಿ ಇರಲಿದೆ ಎಂದು ತಿಳಿಸಿದರು.
ಹೋಂ ಐಸೋಲೇಷನ್ನಲ್ಲಿ ಇರುವುದರಿಂದಲೇ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ನೀಡಿದ್ದೆವು. ಈ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ನಲ್ಲಿ ಇದ್ದವರನ್ನು ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡೋ ಕಾರ್ಯ ಶೀಘ್ರವೇ ಜಾರಿಗೆ ಬರಲಿದೆ ಎಂದರು.