ಬಳ್ಳಾರಿ: ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ಮತ್ತು ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರ ಸಹಯೋಗದೊಂದಿಗೆ ಹೊಸಪೇಟೆ ನಗರದಲ್ಲಿ ಶೇಂಗಾ ಚಿಕ್ಕಿ ಘಟಕವನ್ನು ಪ್ರಾರಂಭಿಸಲಾಯಿತು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯದ ಮೂಲಕ 3ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳಿಗೆ ಶೇಂಗಾ ಚಿಕ್ಕಿ ವಿತರಣೆ ಮಾಡಲು ರೇಣುಕಾ ಯಲ್ಲಮ್ಮ ಸ್ವಸಹಾಯ ಸಂಘದ ಶೇಂಗಾ ಚಿಕ್ಕಿ ಘಟಕವನ್ನು ಹೊಸಪೇಟೆ ನಗರದಲ್ಲಿ ತೆರೆಯಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಅಭಿವೃದ್ಧಿ ನಿರೀಕ್ಷಕಿ ನಾಗವೇಣಿ, ಸಮಾಜದ ಮುಖ್ಯವಾಹಿನಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ನೋಡುವ ದೃಷ್ಟಿಕೋನವನ್ನು ಬದಲಾಯಿಸುವ ನಿಟ್ಟಿನಲ್ಲಿ ಶೇಂಗಾ ಚಿಕ್ಕಿ ಘಟಕವನ್ನು ಮಾನ್ಯ ಜಿಲ್ಲಾಧಿಕಾರಿಗಳ ವಿಶೇಷ ಆಸಕ್ತಿಯಿಂದ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.
ಸಿಡಿಪಿಒ ಅಮರೇಶ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆತು ನಮ್ಮಂತೆಯೇ ಜೀವನವನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದು, ಅವರು ಅವಕಾಶಗಳ ಕೊರತೆಯಿಂದಾಗಿ ಸಮಾಜದಿಂದ ದೂರ ಉಳಿಯುತ್ತಿದ್ದಾರೆ. ಹಾಗಾಗಿ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಸೌಖ್ಯ ಬೆಳಕು ಸಮುದಾಯ ಸೇವಾ ಸಂಸ್ಥೆ ಕಾರ್ಯಕ್ರಮದ ವ್ಯವಸ್ಥಾಪಕರಾದ ಲಕ್ಷ್ಮೀನರಸಮ್ಮ, ಶ್ರೀ ರೇಣುಕಾ ಎಲ್ಲಮ್ಮ
ಸ್ವ ಸಹಾಯ ಸಂಘದ ಅಧ್ಯಕ್ಷ ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.