ಬಳ್ಳಾರಿ:ಸರ್ಕಾರದ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಬೇಕಾದರೆ ನಿಯಮಾನುಸಾರ ಟೆಂಡರ್ ಕರೆಯಬೇಕಾಗುತ್ತದೆ. ಆದರೆ ನೂತನ ವಿಜಯನಗರ ಜಿಲ್ಲೆಯಲ್ಲಿ ಮಾತ್ರ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅಂದಾ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.
ಏಕೆಂದರೆ 6 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯನ್ನು ಟೆಂಡರ್ ಪ್ರಕ್ರಿಯೆ ಮುನ್ನವೇ ಕಾಮಗಾರಿ ನಡೆಸುತ್ತಿರುವುದು ಚರ್ಚೆಗೆ ಕಾರಣವಾಗಿದೆ. ವಿಜಯನಗರ, ಜಿಲ್ಲೆಯಾದ ಬಳಿಕ ಜಿಲ್ಲಾ ಕೇಂದ್ರವಾಗಿರುವ ಹೊಸಪೇಟೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ರಸ್ತೆ ಸೇರಿದಂತೆ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಆದರೆ ಅಭಿವೃದ್ಧಿ ನೆಪದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೆ ಕಾಮಗಾರಿ ಆರೋಪ :ಹೊಸಪೇಟೆ ನಗರದ ಕ್ರೀಡಾಂಗಣದ ಮಧ್ಯೆ 405 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ಕೂಡ ಭರದಿಂದ ಸಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಧ್ವಜಸ್ತಂಭ ನಿರ್ಮಾಣಕ್ಕೆ 6 ಕೋಟಿ ರೂ. ಅನುದಾನ ನೀಡಲಾಗಿದೆ. ವಿಪರ್ಯಾಸವೆಂದರೆ ಧ್ವಜಸ್ತಂಭ ನಿರ್ಮಾಣ ಕಾಮಗಾರಿ ಕುರಿತು ಇನ್ನೂ ಟೆಂಡರ್ ಪ್ರಕ್ರಿಯೆಯೇ ಮುಕ್ತಾಯಗೊಂಡಿಲ್ಲ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕಾಮಗಾರಿ ನಡೆಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಕಾಮಗಾರಿ ನಡೆಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಸಾರ್ವಜನಿಕರಿಗೆ ಬಹಿರಂಗ ಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.