ಬಳ್ಳಾರಿ:ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2021-22 ನೇ ಸಾಲಿನ 11ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಜುಲೈ 13 (ಗುರುವಾರ) ಬೆಳಗ್ಗೆ 10ಕ್ಕೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂರು ಜನ ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ ಸಿದ್ದು ಪಿ ಆಲಗೂರ್ ತಿಳಿಸಿದರು.
ವಿಶ್ವ ವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಕರೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಯಾದ ಥಾವರಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್‍ನ ಅಧ್ಯಕ್ಷ ಡಾ. ಜೆ ಕೆ ಬಜಾಜ್ ಅವರು ಮಾಡಲಿದ್ದಾರೆ ಎಂದು ತಿಳಿಸಿದರು.
ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ವಾರ್ಷಿಕ ಘಟಿಕೋತ್ಸವದ ನೇತೃತ್ವವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ ಸಿದ್ದು ಆಲಗೂರ ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರುಗಳು, ಕುಲಸಚಿವ ಎಸ್ ಸಿ ಪಾಟೀಲ್, ಕುಲಸಚಿವ (ಮೌಲ್ಯಮಾಪನ) ರಮೇಶ್ ಓಲೇಕಾರ ಅವರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
3 ಜನರಿಗೆ ಗೌರವ ಡಾಕ್ಟರೇಟ್ ಪ್ರದಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕವಿತಾ ಮಿಶ್ರಾ, ಹಿರೇಹಾಳ್ ಇಬ್ರಾಹಿಂ, ಪಂಡಿತ ಎಂ.ವೆಂಕಟೇಶ್ ಕುಮಾರ್ ಸೇರಿದಂತೆ ಮೂವರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ಕುಲಪತಿ ಸಿದ್ದು ಆಲಗೂರು ಹೇಳಿದರು.
ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗದ ಒಟ್ಟು 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಸೇರಿ ಒಟ್ಟು 123 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಸ್ವೀಕರಿಸಲಿದ್ದಾರೆ.
03 ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು: ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಖನಿಜ ಸಂಸ್ಕರಣ ವಿಭಾಗದಲ್ಲಿ ರುಬಾನ್.ಎಲ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನ ಶಾಸ್ತ್ರದಲ್ಲಿ ವಿದ್ಯಾರ್ಥಿ ಹಜಿರಾಜಿ.ಎ ಹಾಗೂ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರದಲ್ಲಿ ರುಷಬ್ ಕುಮಾರ್ ಮೆಹ್ತಾ ತಲಾ ಮೂರು ಚಿನ್ನದ ಪದಕ ಪಡೆದಿದ್ದಾರೆ.
02 ಚಿನ್ನದ ಪದಕ ಪಡೆದವರು: ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಕನ್ನಡ ವಿಷಯದಲ್ಲಿ ಮೋಹನ್‍ಕುಮಾರ್ ಆರ್.ಜಿ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಷಯದಲ್ಲಿ ಸ್ವಾತಿ.ಎ, ಭೌತಶಾಸ್ತ್ರ ವಿಷಯದಲ್ಲಿ ಕಾರ್ತಿಕ್ ರೆಡ್ಡಿ ಹೆಚ್. ಕೆ, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಸಮಾಜಶಾಸ್ತ್ರದಲ್ಲಿ ಸುಮಾ ಕಾಯಣ್ಣನವರ ಹಾಗೂ ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಬಿಎಸ್‍ಸಿ ವಿಭಾಗದಲ್ಲಿ ವಿಶಾಲಾಕ್ಷಿ ಅವರು ತಲಾ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಪರೀಕ್ಷಾ ಫಲಿತಾಂಶ: ವಿಶ್ವವಿದ್ಯಾಲಯದ ಸ್ನಾತಕ ಪದವಿಯಲ್ಲಿ ಒಟ್ಟು 12,423 ಸ್ನಾತಕ ಪದವಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಬರೆದು, ತಮ್ಮ ಪದವಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 1,712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ಉತ್ತೀರ್ಣರಾಗಿದ್ದಾರೆ.