ಬೀದರ್: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದರು. ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇಂದು ಜರುಗಿದ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಕಷ್ಟು ಅನ್ಯಾಯವಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಪ್ರಗತಿ ಕೆಲಸಗಳಾಗುತ್ತಿವೆ. ವಿವಿ ಆವರಣದಲ್ಲಿ ಆಡಳಿತ ಭವನ ನಿರ್ಮಾಣಕ್ಕಾಗಿ 25 ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂಬರುವ ಆಯವ್ಯಯದಲ್ಲಿ ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೇ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಅವಶ್ಯಕತೆಯಿರುವ ಬೇಡಿಕೆಗಳನ್ನು ಲಿಖಿತವಾಗಿ ಸಲ್ಲಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ತಿಳಿಸಿದರು.
ಬೋಧಕೇತರ ಹುದ್ದೆಗಳ ಭರ್ತಿ ಕಾರ್ಯ ಪ್ರಕ್ರಿಯೆ: ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಭರ್ತಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಅಥಣಿ ಕಾಲೇಜಿಗೆ 30 ಕೋಟಿ ಅನುದಾನ ನೀಡಲಾಗಿದೆ. ಹೀಗೆ ವಿವಿ ವ್ಯಾಪ್ತಿಯಲ್ಲಿರುವ ಎಲ್ಲ ಕಾಲೇಜುಗಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಿದೆ ಎಂದು ಸಚಿವರು ಹೇಳಿದರು. ನಮ್ಮ ದೇಶ ಕೃಷಿ ಪ್ರಧಾನ ದೇಶ. ಜಾನುವಾರುಗಳು ರೈತರ ಆರ್ಥಿಕತೆಗೆ ಬೆನ್ನೆಲುಬಿನಂತೆ ಕೆಲಸ ಮಾಡುತ್ತವೆ. ಹಾಗೆಯೇ ಗೋವುಗಳಿಗೆ ಪವಿತ್ರ ಸ್ಥಾನಮಾನ ನೀಡಲಾಗಿದೆ.