ಬಸವಕಲ್ಯಾಣ (ಬೀದರ್):ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಎಸ್‌ವೈ ನೇತೃತ್ವದ ಬಿಜೆಪಿ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದ ಹಿತ ಕಾಪಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ ಮಾನವೀಯ ಸಂದೇಶ ಸಾರಿದ ಇಲ್ಲಿಯ ಶರಣರ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 500 ಕೋಟಿ ರೂ. ಘೋಷಿಸಲಾಗಿದೆ. ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸುವ ಮೂಲಕ ಮರಾಠ ಸಮಾಜದ ಜನರ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ ಎಂದರು.
ದೇಶಾದ್ಯಂತ ಕಾಂಗ್ರೆಸ್ ಪಕ್ಷದ ವರ್ಚಸ್ಸು ಕಡಿಮೆಯಾಗುತ್ತಿದೆ. ಹೀಗಾಗಿ, ಕ್ಷೇತ್ರದ ಮತದಾರರು ಬಿಜೆಪಿಯ ಜೊತೆಗಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಕೈಜೋಡಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಜನಧನ್ ಖಾತೆ ತೆಗೆದು ಬಡವರ ಹಾಗೂ ರೈತರಿಗೆ ನೆರವಾಗಿದ್ದಾರೆ. ಮೋದಿ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಬೂತ್‌ಗಳಲ್ಲಿಯೂ ಬಿಜೆಪಿಗೆ ಲೀಡ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.