ಬೀದರ್: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಕಲು ಮುಕ್ತವಾಗಿ ನಡೆಸುವುದಲ್ಲದೆ ಕೊವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸೂಚನೆ ನೀಡಿದರು.
ಬೀದರ್: ನಕಲು ಮುಕ್ತ ಪರೀಕ್ಷೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚನೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೀದರ್ ಜಿಲ್ಲೆಯನ್ನು 'ಕಾಪಿ ಮುಕ್ತ' ಜಿಲ್ಲೆಯಾಗಿ ಮಾಡಬೇಕಾಗಿದೆ. ಹೀಗಾಗಿ ಪರಿಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕು ಎಂದರು.
ಅಲ್ಲದೆ ಕೊವಿಡ್-19 ನಿಯಂತ್ರಣ ಹಿನ್ನೆಲೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೆಸರ್, ಮಾಸ್ಕ್ ಬಳಕೆ ಆಗಲೇಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದರು.
ಈ ವೇಳೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ಮುಂದಿನ ಐದು ದಿನಗಳು ಶಿಕ್ಷಕರು ಹತ್ತನೇ ತರಗತಿ ಮಕ್ಕಳಿಗೆ ಪುನರ್ ಮನನ ಮಾಡಿಸಿ, ಕನಿಷ್ಠ 35 ಪ್ರತಿಶತ ಅಂಕಗಳನ್ನು ಪಡೆದು ಉತ್ತೀರ್ಣರಾಗಲು ಉತ್ತೇಜಿಸಿ. ಲಾಕ್ಡೌನ್ ಅಭ್ಯಾಸದ ಮೇಲೆ ಪರಿಣಾಮ ಬೀರಿದೆ ನಿಜ. ಆದರೆ ಶೇ. 100 ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಿ. ವಿಧ್ಯಾರ್ಥಿಗಳಿಗೆ ಧೈರ್ಯ ತುಂಬಿ ಪರೀಕ್ಷೆಗೆ ಸಿದ್ಧಗೊಳಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಖಾಸಗಿ ಶಾಲೆಗಳ ಡೊನೇಷನ್ ಕಡಿಮೆ ಮಾಡಿ:
ಇದೇ ವೇಳೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಭೆ ನಡೆಸಿದ ಸಚಿವ ಪ್ರಭು ಚವ್ಹಾಣ್, ಕೊರೊನಾದಿಂದಾಗಿ ಜಿಲ್ಲೆಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮಕ್ಕಳ ಭವಿಷ್ಯ ರೂಪಿಸಬೇಕಾದ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಕಡಿಮೆ ಮಾಡಿ ಯಾವುದೇ ಕಾರಣಕ್ಕೂ ಹೆಚ್ಚಿನ ಶುಲ್ಕ ವಿಧಿಸಬೇಡಿ ಎಂದು ಮನವಿ ಮಾಡಿದರು.