ಬಸವಕಲ್ಯಾಣ :ಅಧಿಕ ಮಳೆಯಿಂದಾಗಿ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ನಾರಾಯಣಪೂರ ರಸ್ತೆಯಲ್ಲಿನ ಸಭಾ ಭವನದಲ್ಲಿದ್ದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಕಟೀಲ್ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಘೋಷಣೆ ಹಾಕಿದರು. ರಸ್ತೆ ಬದಿಯಲ್ಲಿ ನಿಂತಿರುವ ಸಂಘದ ಪದಾಧಿಕಾರಿಗಳು ಮತ್ತು ರೈತರನ್ನು ನೋಡಿದ ರಾಜ್ಯಾಧ್ಯಕ್ಷರು, ಕಾರಿನಿಂದ ಇಳಿದು ಅವರ ಸಮಸ್ಯೆ ಆಲಿಸಿದರು.
ಬೆಳೆ ಹಾನಿ ಕುರಿತು ಸರ್ಕಾರದಿಂದ ಸಮೀಕ್ಷೆ ನಡೆಯುತ್ತಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಿದೆ. ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆಗಳ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ರೈತರು ನಿರಂತರವಾಗಿ ಸಂಕಷ್ಟ ಅನುಭವಿಸುತ್ತಾ ಬಂದಿದ್ದಾರೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈ ಸಲವು ಬೆಳೆ ನಷ್ಟ ಅನುಭವಿಸಿದ್ದಾರೆ. ಹಾಗಾಗಿ ಸಂಪೂರ್ಣ ಸಾಲ ಮನ್ನಾ ಮಾಡುವ ಮೂಲಕ ಅನ್ನದಾತರ ಕೈಹಿಡಿಯಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಸುರಿದ ಮಳೆಗೆ ಭಾರಿ ಪ್ರಮಾಣದಲ್ಲಿ ಬೆಳೆ ಮತ್ತು ಕಬ್ಬು ಹಾನಿಯಾಗಿದೆ. ರೈತರು ಆರ್ಥಿಕ ನಷ್ಟಕ್ಕೆ ಸಿಲಿಕಿದ್ದಾರೆ. ಬಿಎಸ್‌ಎಸ್‌ಕೆ 10 ಕೋಟಿ ಅನುದಾನ ಕಲ್ಪಿಸಿ ಪುನಶ್ಚೇತನ ನೀಡಬೇಕು. ಎಲ್ಲ ರೈತರಿಗೆ ಬಡ್ಡಿ ರಹಿತ ಸಾಲ 5 ಲಕ್ಷ ನೀಡಬೇಕು. ಬೆಳೆಗೆ ಕನಿಷ್ಠ ಬೆಂಬಲ ಬೆಳೆ ನೀಡಬೇಕು. ರಾತ್ರಿ ವೇಳೆಯೂ ವಿದ್ಯುತ್ ಅವಶ್ಯಕವಾಗಿದ್ದು, ವಿದ್ಯುತ್ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸುತ್ತಿರುವ ರೈತ ಮುಖಂಡರು ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಕಾರ್ಯಾಧ್ಯಕ್ಷ ವೀರಾರೆಡ್ಡಿ ಪಾಟೀಲ್, ರಾಜ್ಯ ಉಪಾಧ್ಯಕ್ಷ ಖಾಸೀಂ ಅಲಿ, ತಾಲೂಕು ಅಧ್ಯಕ್ಷ ರುದ್ರಯ್ಯ ಸ್ವಾಮಿ, ಉಪಾಧ್ಯಕ್ಷ ಸಂತೋಷ ಕುಮಾರ ಗುದಗೆ, ಮಲ್ಲಿಕಾರ್ಜುನ ಬೇರಿನೂರ ಸೇರಿದಂತೆ ಪದಾಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.