ಬೀದರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮೇಲಸ್ತುವಾರಿ(ದಿಶಾ) ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಸಚಿವ ಭಂಗವಂತ ಖೂಬಾ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ಗುಣಮಟ್ಟವನ್ನು ಆಗಾಗ ಪರಿಶೀಲಿಸಬೇಕು.
ಒಂದು ವೇಳೆ ಯಾವುದೇ ಕಳಪೆ ಮಟ್ಟದ ಆಹಾರ ಕಂಡು ಬಂದರೆ ಸಂಬಂಧಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅದರ ಟೆಂಡರ್ ಪಡೆದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆಯಿಂದ ಮಾಹಿತಿ ಪಡೆದ ಸಚಿವರು ರೈತರಿಗೆ ಕೃಷಿ ಇಲಾಖೆಯಲ್ಲಿರುವ ಹಲವಾರು ಯೋಜನೆಗಳ ಬಗ್ಗೆ ಹೆಚ್ಚಿನ ರೀತಿಯ ಪ್ರಚಾರ ಮಾಡುವುದರ ಜೊತೆಗೆ ಅವರ ಸಮಸ್ಯೆಗಳಿಗೆ ತಕ್ಷಣೆವೇ ಸ್ಪಂದಿಸಬೇಕು ಮತ್ತು ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರ ಸೇರಿದಂತೆ ಇತರೇ ಯಾವುದೇ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಜನರಲ್ಲಿ ಅರಿವು ಮೂಡಿಸಬೇಕು: ಆಯುಷ್ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ 23 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ, ಬೀದರ್ ನಗರದಲ್ಲಿ 25 ಬೆಡ್ ಆಸ್ಪತ್ರೆಯಿದೆ ಎಂದು ಸಚಿವರಿಗೆ ತಿಳಿಸಿದಾಗ ಹೆಚ್ಚಿನ ಜನರು ಆಯುಷ್ ಇಲಾಖೆಯ ಆಸ್ಪತ್ರೆಗೆ ಬರುವಂತೆ ತಮ್ಮ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಜನರಿಗೆ ಅರಿವು ಮೂಡಿಸಬೇಕೆಂದು ಹೇಳಿದರು.
ಯೋಜನೆ ಪೂರ್ಣಗೊಳಿಸಬೇಕು: ಸಚಿವರು ಲೋಕೋಪಯೋಗಿ ಇಲಾಖೆ, ಆರೋಗ್ಯ ಇಲಾಖೆ, ಜಲಜೀವನ ಮಿಷನ್, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಸೇರಿದಂತೆ ಇತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಕಾಲಮಿತಿಯಲ್ಲಿ ತಾವು ಹಾಕಿಕೊಂಡ ಕೆಲಸ ಮತ್ತು ಕಾರ್ಯಗಳು ಪೂರ್ಣಗೊಳಿಸಬೇಕು ಮತ್ತು ಯಾವುದೇ ಕಾರಣಕ್ಕೂ ಅಧಿಕಾರಿಗಳು ನೆಪ ಹೇಳದೇ ಅವುಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರವೂಫುದ್ಧಿನ್ ಕಚೇರಿವಾಲೆ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಜಿಲ್ಲಾ ಪೊಲೀಸ್ ಅಧಿಕಾರಿ ಡೆಕ್ಕಾ ಕಿಶೋರ್ ಬಾಬು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ 10 ಎಕರೆ ಕಬ್ಬು ಬೆಂಕಿಗಾಹುತಿ