ಬಸವಕಲ್ಯಾಣ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತ್ಗಳ ಪಾತ್ರ ಮಹತ್ವದ್ದಾಗಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮನವಿ ಮಾಡಿದರು.
ಗ್ರಾಪಂ ಚುನಾವಣೆ ನಿಮಿತ್ತ ಕಾಂಗ್ರೆಸ್ ಪಕ್ಷದಿಂದ ನಗರದ ಸಾಹಿಲ್ ಫಂಕ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಪೂರ್ವ ಸಿದ್ಧತಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ನಡೆಯಲಿರುವ 26 ಗ್ರಾ.ಪಂ. ಗಳ 513 ಸ್ಥಾನಗಳಲ್ಲಿ ಕನಿಷ್ಠ 400ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಅಧಿಕಾರ ವಿಕೇಂದ್ರೀಕರಣಗೊಳಿಸಿ ಗ್ರಾ.ಪಂ.ಗಳಿಗೆ ಬಲ ತಂದು ಕೊಟ್ಟ ಶ್ರೇಯಸ್ಸು ಮಾಜಿ ಪ್ರಧಾನಿ ದಿ.ರಾಜೀವ ಗಾಂಧಿ ಅವರಿಗೆ ಸಲ್ಲುತ್ತದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುವ ಗ್ರಾ.ಪಂ.ಗಳಿಗೆ ಹೆಚ್ಚಿನ ಅನುದಾನ ನೀಡಿ ಸದೃಢಗೊಳಿಸಿದ್ದು, ಉದ್ಯೋಗ ಖಾತ್ರಿ ಯೋಜನೆ ಮೂಲಕ ಕೃಷಿ, ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿದ ಶ್ರೇಯಸ್ಸು ಪಕ್ಷಕ್ಕೆ ಸಲ್ಲುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟು, ಪಕ್ಷದ ಅಭ್ಯರ್ಥಿ ಪರ ಮತ ಕೇಳಬೇಕು ಎಂದು ಸಲಹೆ ನೀಡಿದರು.