ಬಸವಕಲ್ಯಾಣ: ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲೇ ಬೇಕು, ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಇಲ್ಲ ಎಂದು ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಮುಲ್ಲಾಮಾರಿ ಜಲಾಶಯಕ್ಕೆ ಬಾಗಿನ ಅರ್ಪಣೆ ಶಾಸಕ ರಾಜಶೇಖರ್ ಪಾಟೀಲ್ ತಾಲೂಕಿನ ಖೇರ್ಡಾ(ಬಿ)ಗ್ರಾಮದಲ್ಲಿರುವ ಮುಲ್ಲಾಮಾರಿ ಮೇಲ್ಡಂಡೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ರು. ನಂತರ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಕಳಪೆ ಕಾಮಗಾರಿ ನಡೆದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಅಧಿವೇಶನಲ್ಲಿಯೂ ಚರ್ಚಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮುಲ್ಲಾಮಾರಿ ಮೇಲ್ದಂಡೆ ಯೋಜನೆಯಡಿ ಕಾಲುವೆ ಆಧುನೀಕರಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಯೋಜನೆಯಡಿ ಇಲ್ಲಿ ಸುಂದರವಾದ ಉದ್ಯಾನ, ಮಕ್ಕಳ ಪಾರ್ಕ್ ನಿರ್ಮಿಸಲಾಗುವುದು. ಮಠದ ಪರಿಸರದಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅನುದಾನ ಕಲ್ಪಿಸಲಾಗುವುದು ಎಂದರು.
ಶಾಸಕ ಬಿ.ನಾರಾಯಣರಾವ್ ಮಾತನಾಡಿ, ಅಭಿವೃದ್ಧಿ ಕಾರ್ಯಗಳಿಗಾಗಿ ಪಕ್ಷಾತೀತವಾಗಿ ಎಲ್ಲರೂ ಒಂದಾಗಿ ಪ್ರಯತ್ನಿಸುತ್ತಿದ್ದೇವೆ. ನೀರಾವರಿ ಯೋಜನೆಗಳು ನಿಗದಿತ ಸಮಯದಲ್ಲಿ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಇಲಾಖೆ ಇಇ ವಿಲಾಸಕುಮಾರ ಶೆಟ್ಟಿ ಮಾತನಾಡಿ, 3920 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು 1974 ಮುಲ್ಲಾಮರಿ ಮೇಲ್ದಂಡೆ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಎಡ ಮತ್ತು ಬಲ ದಂಡೆ ಕಾಲುವೆಗಳಿವೆ. 2018ರಲ್ಲಿ ಕಾಲುವೆ ಆಧುನೀಕರಣಕ್ಕೆ 78 ಕೋಟಿ ಅನುದಾನ ಒದಗಿಸಿ ಕೆಲಸಕ್ಕೆ ಚಾಲನೆ ನೀಡಲಾಗಿತ್ತು. ಈಗ ಕೆಲಸ ಮುಕ್ತಾಯ ಹಂತದಲ್ಲಿದೆ. 0.78 ಟಿಎಂಸಿ ಸಾಮರ್ಥ್ಯ ಜಲಾಶಯ ಜುಲೈ 21ಕ್ಕೆ ಭರ್ತಿಯಾಗಿದ್ದು, ಹೆಚ್ಚುವರಿ ನೀರು ನಾಲೆಗೆ ಬಿಡಲಾಗಿದೆ ಎಂದು ಮಾಹಿತಿ ನೀಡಿದರು.