ಬೆಳಕೇರಾ ಗ್ರಾಮಕ್ಕೆ ಭೇಟಿಕೊಟ್ಟು ಅಧಿಕಾರಿ, ಶಾಸಕರಿಂದ ಪರಿಶೀಲನೆ ಬೀದರ್:ಚಿಟಗುಪ್ಪ ತಾಲೂಕಿನ ಬೆಳಕೇರಾ ಗ್ರಾಮದಲ್ಲಿ ವಾಂತಿ, ಭೇದಿಯಿಂದಾಗಿ ಸುಮಾರು 27 ಮಂದಿ ಅಸ್ವಸ್ಥರಾಗಿದ್ದು, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಹೆಚ್ಚಿನ ಚಿಕಿತ್ಸೆಗಾಗಿ 8 ಜನರನ್ನು ಬೀದರ್ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗ್ರಾಮದ ಹೊಸ ಬಡಾವಣೆಯಲ್ಲಿ ಹೆಚ್ಚಾಗಿ ಈ ಪ್ರಕರಣಗಳು ಕಂಡುಬಂದಿವೆ. ಮೇಲ್ನೋಟಕ್ಕೆ ಕಲುಷಿತ ಕುಡಿಯುವ ನೀರು ಸೇವನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈಗಾಗಲೇ ಕುಡಿಯುವ ನೀರನ್ನು ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯಾಧಿಕಾರಿ ಡಾ. ವಿಜಯಕುಮಾರ ಹರಿಸ್ಕರ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾದವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಕೆಲವರು ಚೇತರಿಸಿಕೊಂಡಿದ್ದಾರೆ. ಇನ್ನೂ ಕೆಲವರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಗ್ರಾಮದಲ್ಲಿ ಮುಂಜಾಗೃತಾ ಕ್ರಮ ವಹಿಸಲಾಗಿದೆ. ಆರೋಗ್ಯ ಕಾರ್ಯಕರ್ತರು ಗ್ರಾಮದಲ್ಲಿಯೇ ಜನರಿಗೆ ಪ್ರಥಮ ಚಿಕಿತ್ಸೆ ನೀಡುವ ಜೊತೆಗೆ ಜಾಗೃತಿ ಮೂಡಿಸುತ್ತಿದ್ದಾರೆ. ವಾಂತಿ, ಭೇದಿ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಭಾನುವಾರ ಆಸ್ಪತ್ರೆ ಹಾಗೂ ಗ್ರಾಮಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಭಾನುವಾರ ಡಿಎಚ್‌ಒ ಡಾ.ರವಿಕಾಂತ ಸ್ವಾಮಿ, ಡಿಎಸ್‌ಒ ಡಾ. ಶಂಕರರಾವ ಬೊಮ್ಮಾ, ತಹಶೀಲ್ದಾರ್ ರವೀಂದ್ರ ದಾಮಾ, ತಾ.ಪಂ ಇಒ ಅಕ್ರಂಪಾಷ, ಟಿಎಎಚ್ಒ ಡಾ. ಶಿವಕುಮಾರ ಸಿದ್ದೇಶ್ವರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಸೂಕ್ತ ಚಿಕಿತ್ಸೆ ಹಾಗೂ ಗ್ರಾಮದಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯ ಸೂಚನೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯರ ಭೇಟಿ:ಭಾನುವಾರ ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ ಧಾವಿಸಿ ರೋಗಿಗಳೊಂದಿಗೆ ಮಾತನಾಡಿ, ಧೈರ್ಯ ತುಂಬಿದರು. ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ನಂತರ ಬೆಳಕೇರಾ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಿಮ್ಮ ಬೇಜವಾಬ್ದಾರಿಯಿಂದ ಇಂತಹ ಘಟನೆಗಳಾಗುತ್ತಿವೆ. ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಸಿದರು. ತಾ.ಪಂ ಇಒ ಮತ್ತು ತಹಶೀಲ್ದಾರರು ಚಿಟಗುಪ್ಪಾ ಪಟ್ಟಣ ಹಾಗೂ ಎಲ್ಲ ಗ್ರಾಮಗಳಲ್ಲಿ ಡಂಗುರ ಸಾರಿ ಜನರಿಗೆ ಬಿಸಿ ನೀರು ಕುಡಿಯುವಂತೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ, ಗ್ರಾ.ಪಂ ಸದಸ್ಯರು, ಪ್ರಮುಖರು ಇದ್ದರು.
ಭಾನುವಾರ ಬೆಳಕೇರಾ ಗ್ರಾಮ ಹಾಗೂ ಆಸ್ಪತ್ರೆಗೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಭೇಟಿ ನೀಡಿ ಗ್ರಾಮಸ್ಥರಿಗೆ ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ ಧೈರ್ಯ ತುಂಬಿದರು. ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ತಕ್ಷಣವೇ ಚಿಕಿತ್ಸೆ ದೊರೆಯುವಂತೆ ಕ್ರಮ ವಹಿಸಬೇಕು. ಶುದ್ದ ಕುಡಿಯುವ ನೀರು ಪೂರೈಕೆಯಾಗುವಂತೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಜಾಗೃತಿ ಮೂಡಿಸುವಂತೆ ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಯಾದಗಿರಿ: ವಾಂತಿ, ಭೇದಿ ಪ್ರಕರಣಗಳು ಉಲ್ಬಣ.. 40ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು