ಬಸವಕಲ್ಯಾಣ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ರೈತರ ಸಮಸ್ಯೆ ಕುರಿತು ಚರ್ಚಿಸಿ ಪರಿಹಾರ ಕಲ್ಪಿಸಲು ಕೂಡಲೇ ವಿಧಾನ ಸಭೆ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿಧಾನ ಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ತಾಲೂಕಿನ ವಿವಿಧೆಡೆ ಅತಿವೃಷ್ಟಿ ಹಾನಿ ವೀಕ್ಷಣೆ ನಡೆಸಿದ ನಂತರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದರೆ ಸಾಲದು. ತಕ್ಷಣ ವಿಧಾನಸಭೆ ಜಂಟಿ ಅಧಿವೇಶನ ನಡೆಸಿ, ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ರೈತರು ಸಂಪೂರ್ಣ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಿದ್ದ ಸರ್ಕಾರ ನಯಾ ಪೈಸೆ ಪರಿಹಾರ ಧನ ಬಿಡುಗಡೆ ಮಾಡದೇ ನಿರ್ಲಕ್ಷ ವಹಿಸಿದೆ. ಹಿಂದಿನ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ನೆರೆ ಹಾವಳಿ ಸಂಭವಿಸಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಆದರೆ, ಸರ್ಕಾರದಿಂದ ಇದುವರೆಗೂ ಪರಿಹಾರ ಕಲ್ಪಿಸಲಾಗಿಲ್ಲ. ಬಿಜೆಪಿ ಸರ್ಕಾರ ಕಣ್ಣು, ಕಿವಿ, ಮೂಗು, ಬಾಯಿ ಸೇರಿದಂತೆ ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ. ಸುಳ್ಳೇ ಇವರ ಮನೆ ದೇವರು ಆಗಿದೆ ಎಂದು ಸರ್ಕಾರದ ವಿರುದ್ಧ ಹರಿ ಹಾಯ್ದರು.