ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಬೀದರ್: ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಾವು ಏರುತ್ತಿದೆ. ಕಾಂಗ್ರೆಸ್, ಭಾರತೀಯ ಜನತಾ ಪಕ್ಷ (ಬಿಜೆಪಿ), ಜಾತ್ಯತೀತ ಜನತಾದಳ (ಜೆಡಿಎಸ್), ಆಮ್ ಆದ್ಮಿ ಪಕ್ಷ (ಆಪ್) ಸೇರಿದಂತೆ ಇನ್ನಿತರ ಸ್ಥಳೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿವೆ. ಜೊತೆಗೆ ಈ ಪಕ್ಷಗಳ ನಾಯಕರು ಮತ್ತು ಮುಖಂಡರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.
ಅಂತೆಯೇ ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೆಸ್, ಇದೀಗ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಕಾಂಗ್ರೆಸ್‍ನವರು ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ. ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಸಿಂದೋಲ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬೀದರ್ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಜನರ ಮನೆ-ಮನೆಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಜಿಲ್ಲೆಯ ಎಲ್ಲ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಯುವ ಮೋರ್ಚಾ ಕಾರ್ಯಕರ್ತರು ಮುಂದಿನ 30 ದಿನ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ - ತೇಜಸ್ವಿ ಸೂರ್ಯ:ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಇದ್ದು, ಈ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದೇವೆ. ಇದನ್ನು ಗಾಳಿಯಲ್ಲಿ ಗುಂಡು ಹಾರಿಸಿದಂತೆ ಹೇಳುತ್ತಿಲ್ಲ. ಚಾಮರಾಜನಗರದಿಂದ ಬೀದರ್ವರೆಗೆ ಪ್ರವಾಸಿ ಮಾಡಿರುವೆ. ಎಲ್ಲೆಡೆ ಕಾರ್ಯಕರ್ತರ ಉತ್ಸಾಹದ ಆಧಾರದ ಮೇಲೆ ಹೇಳುತ್ತಿರುವೆ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯದ್ದು ಆಂತರಿಕ ಪ್ರಜಾಪ್ರಭುತ್ವ- ತೇಜಸ್ವಿ ಸೂರ್ಯ:ಅರ್ಧ ಗಂಟೆಯಲ್ಲಿ ಮನೆಯಲ್ಲಿ ಕುಳಿತು ದೇವೇಗೌಡರು ಯಾರಿಗೆ ಜೆಡಿಎಸ್ ಟಿಕೆಟ್ ಕೊಡಬೇಕು ಎನ್ನುವುದನ್ನು ಫೈನಲ್ ಮಾಡುತ್ತಾರೆ. ನನಗೆ ಇಷ್ಟು, ನಿನಗೆ ಇಂತಿಷ್ಟು ಎಂದು ಹಂಚಿಕೆ ಮಾಡಿಕೊಂಡು ಕಾಂಗ್ರೆಸ್‍ನ ಎರಡ್ಮೂರು ಬಣಗಳು ಅಂತಿಮಗೊಳಿಸುತ್ತವೆ. ಆದರೆ ಬಿಜೆಪಿ ಪ್ರತಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಾರೆ. ರಾಜ್ಯದ 22 ಸಾವಿರ ಶಕ್ತಿಗಳ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದೆ. ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚರ್ಚಿಸಿ ಬಿಜೆಪಿ ಟಿಕೆಟ್ ಅಂತಿಮಗೊಳಿಸಲಾಗಿದೆ. ಇದು ಬಿಜೆಪಿಯ ಆಂತರಿಕ ಪ್ರಜಾಪ್ರಭುತ್ವ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸಮರ್ಥಿಸಿಕೊಂಡರು.
ಇನ್ನು, ಕಾರ್ಯಕ್ರಮದಲ್ಲಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಮುಖಂಡ ಡಾ. ಶೈಲೇಂದ್ರ ಬೆಲ್ದಾಳೆ. ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಎನ್‍ಎಸ್‍ಎಸ್‍ಕೆ ಅಧ್ಯಕ್ಷ ಡಿ. ಕೆ. ಸಿದ್ರಾಮ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಶೇಖಾಪುರ ಉಪಸ್ಥಿತರಿದ್ದರು.
ಇದನ್ನೂ ಓದಿ:ನಾಳೆ ಮೈಸೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಈ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ನಿರ್ಬಂಧ