ಬೆಂಗಳೂರು:ಸೋಮವಾರದಿಂದ ಸಿಎಂ ಕುಮಾರಸ್ವಾಮಿ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರ ಪರವಾಗಿ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಲಿದ್ದಾರೆ.
ಉಪಚುನಾವಣೆ: ಸೋಮವಾರದಿಂದ ಪ್ರಚಾರದ ಅಖಾಡಕ್ಕೆ ಸಿಎಂ ಎಂಟ್ರಿ - kannadanews
ನಾಳೆಯಿಂದ ಎರಡು ದಿನಗಳ ಕಾಲ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಹುಬ್ಬಳ್ಳಿಯಲ್ಲೇ ನಾಳೆ ರಾತ್ರಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಮೇ 14 ರಂದು ಕಲಬುರಗಿಗೆ ತೆರಳಿ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಚುನಾವಣಾ ಪ್ರಚಾರದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸುಭಾಷ್ ವಿ.ರಾಠೋಡ್ ಅವರ ಪರವಾಗಿ ಸಿಎಂ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಅದೇ ದಿನ ರಾತ್ರಿ ಅವರು ಬೆಂಗಳೂರಿಗೆ ವಾಪಸ್ಸಾಗುವ ಸಾಧ್ಯತೆ ಇದೆ.
ಮೈತ್ರಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ನಂತರ ಜೆಡಿಎಸ್ ನಾಯಕರು ಚುನಾವಣಾ ಪ್ರಚಾರಕ್ಕೆ ಬರುತ್ತಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್ ವಲಯದಿಂದ ಕೇಳಿಬಂದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಮುಂದಾಗಿದ್ದಾರೆ.