ಬೆಂಗಳೂರು: ನಗರದ ವಿವಿಧ ಭಾಗಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯ ನಾಯಕರುಗಳು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಜಂಟಿ ಸಮಾವೇಶ ಸಮಾವೇಶದಲ್ಲಿ 5 ಲಕ್ಷ ಮಂದಿಯನ್ನು ಸೇರಿಸುವ ಗುರಿ ಹೊಂದಿದ್ದು, ಕನಿಷ್ಠ ಒಂದರಿಂದ ಎರಡು ಲಕ್ಷ ಮಂದಿಯನ್ನು ಬೆಂಗಳೂರಿನಿಂದಲೇ ಕರೆಸುವ ಕಾರ್ಯ ಆಗಲಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಸಂಜೆ 4:30 ರ ನಂತರ ಸಮಾವೇಶ ಆರಂಭಗೊಳ್ಳಲಿದ್ದು, ಆಂಧ್ರಪ್ರದೇಶದ ಸಭೆಯೊಂದರಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ನೇರವಾಗಿ ಇಲ್ಲಿಗೆ ಆಗಮಿಸಲಿದ್ದಾರೆ.
ಈಗಾಗಲೇ ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರಿದ್ದಾರೆ. ಮತ್ತು ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.