ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕ್ಷೇತ್ರದ ಪ್ರಮುಖ ನಾಯಕರ ಜೊತೆ ಸಭೆ ನಡೆಯಿತು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣಭೈರೇಗೌಡ, ಶಾಸಕರಾದ ಎಸ್.ಟಿ. ಸೋಮಶೇಖರ್, ಭೈರತಿ ಸುರೇಶ್, ಭೈರತಿ ಬಸವರಾಜು, ಅಖಂಡ ಶ್ರೀನಿವಾಸ್ ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎಂ. ರಾಜಕುಮಾರ್ ಹಾಗೂ ಇತರ ಪ್ರಮುಖ ನಾಯಕರು ಭಾಗವಹಿಸಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಗೆಲುವಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆದಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ಕ್ಷೇತ್ರ ಹಂಚಿಕೆ ಸಂದರ್ಭದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿತ್ತು. ಸೂಕ್ತ ಅಭ್ಯರ್ಥಿ ಸಿಗದ ಹಿನ್ನೆಲೆ ಜೆಡಿಎಸ್, ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಕೃಷ್ಣಬೈರೇಗೌಡರನ್ನು ಅಭ್ಯರ್ಥಿಯಾಗಿ ಅಂತಿಮಗೊಳಿಸಲಾಗಿದ್ದು, ನಿನ್ನೆ ಅವರು ನಾಮಪತ್ರ ಕೂಡ ಸಲ್ಲಿಸಿದ್ದಾರೆ.
ಕಾಂಗ್ರೆಸ್ಗೆ ಪ್ರತಿಷ್ಠೆಯಾಗಿರುವ ಬೆಂಗಳೂರು ಉತ್ತರ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ನಾಯಕರು ಸಭೆಯಲ್ಲಿ ಈ ಭಾಗದ ಶಾಸಕರಿಗೆ ಸೂಚನೆ ನೀಡಿದ್ದು, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣಾ ಪ್ರಚಾರ ಹೇಗೆ ನಡೆಸಬೇಕು, ಮತ್ತಿತರ ಕಾರ್ಯತಂತ್ರದ ಕುರಿತು ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.