ಕರ್ನಾಟಕ

karnataka

ETV Bharat / state

ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ.. ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬೇಡ: ಸಿಎಂ ಕಿವಿಮಾತು - ನವಜೋಡಿಗಳಿಗೆ ಶುಭಹಾರೈಸಿದ ಸಿಎಂ ಸಿದ್ದರಾಮಯ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 37 ಜೋಡಿಗಳು ಹಸಮಣೆ ಏರಿವೆ.

37 couples got married in Madappana Betta
ಮಾದಪ್ಪನ ಬೆಟ್ಟದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ 37 ಜೋಡಿ

By ETV Bharat Karnataka Team

Published : Sep 27, 2023, 5:55 PM IST

Updated : Sep 27, 2023, 6:30 PM IST

ಮಾದಪ್ಪನ ಬೆಟ್ಟದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ 37 ಜೋಡಿ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಅದ್ಧೂರಿಯಾಗಿ ಸಾಮೂಹಿಕ ವಿವಾಹ ನೆರವೇರಿದ್ದು, 37 ಜೋಡಿಗಳು ಮಲೆ ಮಹದೇಶ್ವರನ ತಪೋಭೂಮಿಯಲ್ಲಿ ನವ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಮಂಗಳಸೂತ್ರ ವಿತರಿಸಿ ನವಜೋಡಿಗಳಿಗೆ ಶುಭ ಹಾರೈಸಿದರು‌.

39 ಮಂದಿ ನವ ಜೋಡಿಗಳು ಸಾಮೂಹಿಕ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ, 37 ಮಂದಿ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ನವಜೋಡಿಗಳಲ್ಲಿ ಒಂದು ವಿಶೇಷ ಚೇತನರ ಜೋಡಿ, ಎರಡು ಪ್ರೇಮ ವಿವಾಹ ಮಾಡಿಕೊಳ್ಳುತ್ತಿದ್ದ ಜೋಡಿಗಳೂ ಇದ್ದವು. ಮದುವೆ ಕಾರ್ಯಕ್ರಮದಲ್ಲಿ ವರನೊಬ್ಬನ ಪೇಟ ಸರಿಯಾಗಿ ಧರಿಸದೇ ಇದ್ದದ್ದನ್ನು ಗಮನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದನ್ನು ತಾವೇ ಸರಿಪಡಿಸಿ ಗಮನ ಸೆಳೆದರು.

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬೇಡ :ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು. ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ಧೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ಧೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಸಿಎಂ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ: ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಹದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು, ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.

ಇದನ್ನೂ ಓದಿ:ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್‌ ಮಾಡ್ತೀವಿ: ಸಿದ್ದರಾಮಯ್ಯ

Last Updated : Sep 27, 2023, 6:30 PM IST

ABOUT THE AUTHOR

...view details