ಚಾಮರಾಜನಗರ:ರಾಜ್ಯ ಸರ್ಕಾರದಲ್ಲಿ ಮಹತ್ತರ ಬದಲಾವಣೆಗಳು ಆಗುತ್ತವಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದ ಬಳಿಕ ಎಲ್ಲವೂ ತಿಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹೇಳಿದ್ದಾರೆ. ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ಧಾರ್ಮಿಕ ಕಾರ್ಯಕ್ರಮದ ಬಳಿಕ ಅವರು ಮಾತನಾಡಿದರು.
ನಾಳೆ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದು, ಅವರು ಏನು ಸಲಹೆ-ಸೂಚನೆ ಕೊಡುತ್ತಾರೋ ಗೊತ್ತಿಲ್ಲ. ಅವರು ಬಂದ ಬಳಿಕ ಎಲ್ಲವೂ ತಿಳಿಯಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದ್ದು, ಶಾ ಭೇಟಿ ಬಳಿಕ ಅದು ಕೂಡ ಸ್ಪಷ್ಟವಾಗಿ ತಿಳಿದುಬರಲಿದೆ ಎಂದು ತಿಳಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ ಜನರ ವಿಶ್ವಾಸ ಗಳಿಸುವ ಉದ್ದೇಶದಿಂದ ನಾನು, ಸಿಎಂ ಹಾಗೂ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರ ಪಡೆಯಲಿದ್ದು, 130-140 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದರು.