ಚಾಮರಾಜನಗರ:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆದಿವಾಸಿ ಯುವಜನರಿಗೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ 1 ವಾರ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಶಿಬಿರ ಹಮ್ಮಿಕೊಂಡು ಗಮನ ಸೆಳೆದಿದೆ.
ಜಿಲ್ಲಾ ಎಸ್ಪಿ ದಿವ್ಯಾಸಾರಾ ಥಾಮಸ್ ಶಿಬಿರ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಆದಿವಾಸಿ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ನೆರವಾಗುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಏಳು ದಿನಗಳ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದನ್ನು ಸದಪಯೋಗಪಡಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.
ಆದಿವಾಸಿಗಳ ನಿರುದ್ಯೋಗಿ ಯುವಕ ಯುವತಿಯರಿಗೆ ಸೂಕ್ತ ತರಬೇತಿ ಇಲ್ಲದೇ ಸರ್ಕಾರಿ ಉದ್ಯೋಗಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ನಿಟ್ಟಿನಲ್ಲಿ ತರಬೇತಿ ನೀಡಬೇಕು ಎಂಬ ಒತ್ತಾಯ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಆದಿವಾಸಿಗಳ ಮುಖಂಡರ ಸಭೆಯಲ್ಲಿ ಕೇಳಿ ಬಂದಿತ್ತು. ಹಾಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲಾಖೆಯ ಈ ಸೌಲಭ್ಯ ಬಳಸಿಕೊಂಡು ಪ್ರಗತಿ ಸಾಧಿಸಬೇಕು ಎಂದು ಆಶಿಸಿದರು.
ಕೊಳ್ಳೇಗಾಲದ ಡಿವೈಎಸ್ಪಿ ಜಿ ನಾಗರಾಜು ಮಾತನಾಡಿ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಆದಿವಾಸಿ ಸಮುದಾಯದ ನಿರುದ್ಯೋಗಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ. ಆದಿವಾಸಿ ಯುವ ಸಮುದಾಯ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಮೊದಲ ಬಾರಿಗೆ ಆದಿವಾಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿರುವುದು ಶ್ಲಾಘನೀಯವಾಗಿದೆ.