ಚಾಮರಾಜನಗರ:ಜುಲೈ 9ರಂದು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಪಡಿತರ ಕಿಟ್ ವಿತರಿಸುವಾಗ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸದೇ ಕೋವಿಡ್-19 ಶಿಷ್ಟಾಚಾರ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯ ಕೊಳ್ಳೇಗಾಲ ತಾಲೂಕು ಕಾರ್ಮಿಕ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಕೊಳ್ಳೇಗಾಲದಲ್ಲಿ ಹಮ್ಮಿಕೊಂಡಿದ್ದ ಪಡಿತರ ಕಿಟ್ ವಿತರಣಾ ಕಾರ್ಯದಲ್ಲಿ ಯಾವುದೇ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಿಲ್ಲ. ಕಾರ್ಮಿಕರು ಮಾಸ್ಕ್ ಧರಿಸದೇ, ದೈಹಿಕ ಅಂತರ ಪಾಲನೆ ಮಾಡದೇ ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಜನದಟ್ಟಣೆ ಉಂಟಾಗಿ ವಿತರಣಾ ಕಾರ್ಯಕ್ರಮ ಅಸ್ತವ್ಯಸ್ತವಾಗಿದ್ದ ಕುರಿತು ಬಿತ್ತರಗೊಂಡ ಮಾಧ್ಯಮಗಳ ವರದಿ ಆಧರಿಸಿ ಚಾಮರಾಜನಗರ ಡಿಸಿ ಡಾ.ಎಂ.ಆರ್.ರವಿ ಕೊಳ್ಳೇಗಾಲ ತಾಲೂಕು ಕಾರ್ಮಿಕ ನಿರೀಕ್ಷಕ ಚಂದ್ರು ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.