ಕರ್ನಾಟಕ

karnataka

ETV Bharat / state

KSOU ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಚಾಮರಾಜನಗರದ ಇಬ್ಬರು ವಶಕ್ಕೆ - question paper sales

ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ಪ್ರಶ್ನೆ ಪತ್ರಿಕೆಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಕೆಎಸ್​ಒಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ
ಕೆಎಸ್​ಒಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ

By ETV Bharat Karnataka Team

Published : Sep 26, 2023, 2:22 PM IST

ಚಾಮರಾಜನಗರ:ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವ ಜಾಲ ಬೆಳಕಿಗೆ ಬಂದಿದ್ದು, ಚಾಮರಾಜನಗರ ಪ್ರಾದೇಶಿಕ ಕೇಂದ್ರದಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮುಕ್ತ ವಿವಿ ಚಾಮರಾಜನಗರ ಪ್ರಾದೇಶಿಕ ಕೇಂದ್ರದ ಇಬ್ಬರು ಹಂಗಾಮಿ ನೌಕರರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ‌.‌

ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿ ಹಣ ಪಡೆಯುತ್ತಿದ್ದ ಜಾಲವನ್ನು ಬಯಲಿಗೆಳೆದಿದ್ದಾರೆ.

ಚಾಮರಾಜನಗರ ಪ್ರಾದೇಶಿಕ ಕೇಂದ್ರದ ನೌಕರರು ವಾಟ್ಸ್‌ಆ್ಯಪ್ ಮೂಲಕ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುತ್ತಿದ್ದರು ಎನ್ನಲಾಗಿದ್ದು ಆನ್‌ಲೈನ್ ಮೂಲಕ ಹಣ ಪಡೆದ ಇವರು ಮತ್ತೊಬ್ಬರಿಗೆ ಹಣ ಸಂದಾಯ ಮಾಡುತ್ತಿದ್ದರು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಬಿ.ಕಾಂ ಅಂತಿಮ‌ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವಾಗ ವಿದ್ಯಾರ್ಥಿ ಗಮನಿಸಿ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಗೆ ದೂರು ಕೊಟ್ಟಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಈ ಹಿಂದೆ ಇಬ್ಬರು ವಿದ್ಯಾರ್ಥಿಗಳ ಬಂಧನ:ಇದೇ ಪ್ರಕರಣದಲ್ಲಿ ಮೊನ್ನೆ ವಿದ್ಯಾರ್ಥಿ ನೀಡಿದ ದೂರಿನ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಮುಕ್ತ ವಿವಿ ನಿರ್ಧರಿಸಿದೆ ಕೂಡ. ಬಿಕಾಂ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೆ. 4ರಿಂದ ಪದವಿ ವಿಭಾಗದ ಪರೀಕ್ಷೆಗಳು ಆರಂಭವಾಗಿತ್ತು. ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಬಂಧಿತ ವಿದ್ಯಾರ್ಥಿಗಳು 3 ಸಾವಿರ ರೂ. ಪಡೆದು ವಾಟ್ಸ್​ಆ್ಯಪ್​ಗೆ ಕಳುಹಿಸಿದ್ದರು.

ಹೀಗಾಗಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಧೃಡಪಟ್ಟಿದ್ದು, ವಾಟ್ಸ್​ಆ್ಯಪ್​ನಲ್ಲಿ ಕಳುಹಿಸಿದವರು ಯಾರು?. ಎಲ್ಲಿಂದ ಕಳುಹಿಸಲಾಗಿದೆ? ಎಂಬ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಮೈಸೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತು ರಾಜ್ 'ಈಟಿವಿ ಭಾರತ್'​ಗೆ ಮಾಹಿತಿ ನೀಡಿದ್ದರು.

ಈ ಬಗ್ಗೆ ಮುಕ್ತ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ವಿ.ಪ್ರವೀಣ್ ಪ್ರತಿಕ್ರಿಯಿಸಿ, ಅಂತಿಮ ವರ್ಷದ ಬಿ.ಕಾಂ ಸೆಮಿಸ್ಟರ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ದೂರಿನ ಮೇರೆಗೆ ಜಯಲಕ್ಷ್ಮಿಪುರಂ ಪೊಲೀಸರು ಪರೀಕ್ಷಾಂಗ ಕೊಠಡಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾದ ಕೊನೆಯ ಸೆಮಿಸ್ಟರ್ ಪರೀಕ್ಷೆಯನ್ನು ಮರು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ:ಮುಕ್ತ ವಿವಿಯ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣ : ಇಬ್ಬರು ವಿದ್ಯಾರ್ಥಿಗಳ ಬಂಧನ

ABOUT THE AUTHOR

...view details