ಚಾಮರಾಜನಗರ :ಡೆಪ್ಯುಟಿ ಸ್ಪೀಕರ್ ಸ್ಥಾನ ನನಗೆ ಬೇಡ, ಶಾಸಕನಾಗಿಯೇ ಮುಂದುವರಿಯುತ್ತೇನೆ ಎನ್ನುವ ಮೂಲಕ ಶಾಸಕ ಸಿ ಪುಟ್ಟರಂಗಶೆಟ್ಟಿ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ನಾಯಕರು ಭರವಸೆ ನೀಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಕೈ ತಪ್ಪಿದೆ. ಇದಕ್ಕೆ ಕಾರಣ ಏನೆಂದು ಗೊತ್ತಿಲ್ಲ. ಸಚಿವ ಸ್ಥಾನ ನೀಡದ ಹಿನ್ನೆಲೆ ಹೈಕಮಾಂಡ್ ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡಿದೆ. ಆ ಹುದ್ದೆ ನನಗೆ ಬೇಡ. ಡೆಪ್ಯುಟಿ ಸ್ಪೀಕರ್ ಸ್ಥಾನ ಕಾರ್ಯಭಾರದ ಒತ್ತಡದಿಂದ ಕ್ಷೇತ್ರದ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದರು.
ಡೆಪ್ಯುಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಕೈಗೆಟುಕುವುದಿಲ್ಲ. ಹಾಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡ ಎಂಬುದು ಕ್ಷೇತ್ರದ ಮತದಾರರು ಹಾಗು ಬೆಂಬಲಿಗರ ಒತ್ತಾಯವಾಗಿದೆ. ನಾನು ಉಪ್ಪಾರ ಸಮಾಜದ ಏಕೈಕ ಶಾಸಕ. ಯಾವಾಗಲೂ ಜನರ ಜೊತೆ ಬೆರೆತು ಕೆಲಸ ಮಾಡುವವನು. ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಹಾಗು ಜಮೀರ್ ಅಹಮದ್ ನನಗೆ ಒತ್ತಾಯಿಸಿದ್ದರು. ನನಗೆ ಬೇಡ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.
ಅಭಿಮಾನಿಯೊಬ್ಬರಿಂದ ಆತ್ಮಹತ್ಯೆ ಪತ್ರ :ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಕೊಡದಿದ್ರೆ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಅಭಿಮಾನಿಯೊಬ್ಬ ಪತ್ರವನ್ನು ಬರೆದು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶೇರ್ ಮಾಡಿರುವ ಘಟನೆ ನಿನ್ನೆ ನಡೆದಿತ್ತು. ನಲ್ಲೂರು ಮೋಳೆಯ ಚಂದ್ರಶೇಖರ್ ಎಂಬವರು ಈ ಪತ್ರ ಬರೆದಿದ್ದರು. ಇದರಲ್ಲಿ ನಮ್ಮ ಉಪ್ಪಾರ ಸಮಾಜದ ಏಕೈಕ ಶಾಸಕ ಹಾಗೂ ನಾಲ್ಕು ಬಾರಿ ಆಯ್ಕೆಯಾಗಿರುವ ಪುಟ್ಟರಂಗಶೆಟ್ಟಿ ಅವರಿಗೆ ಕಾಂಗ್ರೆಸ್ ಸಚಿವ ಸ್ಥಾನ ಕೊಡಬೇಕೆಂದು ಒತ್ತಾಯಿಸಿದ್ದರು.