ಗುಂಡ್ಲುಪೇಟೆ(ಚಾಮರಾಜನಗರ): ಅಕ್ಟೋಬರ್ ಅಂತ್ಯದಲ್ಲಿ ನೀರಾವರಿ ಖಾತೆ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರನ್ನು ಕರೆಸಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ತಿಳಿಸಿದರು.
ತಾಲೂಕಿನ ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವ ಗಾಂಧಿ ಗ್ರಾಮ ಏತ ನೀರಾವರಿ ಎರಡನೇ ಹಂತದ ಯೋಜನೆಯ ಕಾಮಗಾರಿಯನ್ನು ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿ ಮಾತನಾಡಿದರು. ತಾಲೂಕಿನ ಬೇಗೂರು ಹೋಬಳಿಯ ಕಮರಹಳ್ಳಿ ಕೆರೆಯಿಂದ ಇನ್ನುಳಿದ ಐದು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಪಟ್ಟಂತೆ ರಾಘವಾಪುರ, ಹಳ್ಳದಮಾದಹಳ್ಳಿ, ಅಗತಗೌಡನಹಳ್ಳಿ, ಮಳವಳ್ಳಿ, ಗರಗನಹಳ್ಳಿ ಕೆರೆಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.