ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಪ್ರತ್ಯೇಕ ಎರಡು ಘಟನೆಗಳು ನಡೆದಿದ್ದು, ಒಂದೂರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ಬರದೇ ಕರಿನೆರಳು ಆವರಿಸಿದರೆ ಮತ್ತೊಂದು ಕಡೆ ಹಿಂದೂ ವೃದ್ಧೆಯ ಅಂತ್ಯಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
ಅಂತ್ಯಸಂಸ್ಕಾರಕ್ಕೆ ಸಾಮಾಜಿಕ ಬಹಿಷ್ಕಾರದ ಕರಿನೆರಳು:ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ ಕುಟುಂಬವೊಂದನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬಂದಿದ್ದು, ಶವ ಸಂಸ್ಕಾರಕ್ಕೆ ಗ್ರಾಮಸ್ಥರು ಬರದಿರುವ ಘಟನೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮದ ರಂಗಶೆಟ್ಟಿ ಎಂಬವರು (65) ಭಾನುವಾರ ಬೆಳಗ್ಗೆ ಮೃತಪಟ್ಟಿದ್ದು, ಗ್ರಾಮದಿಂದ ರಂಗಶೆಟ್ಟಿ ಅವರ ಕುಟುಂಬವನ್ನು ಬಹಿಷ್ಕರಿಸಿರುವ ಕಾರಣಕ್ಕಾಗಿ ಶವಸಂಸ್ಕಾರಕ್ಕೆ ಅವರ ಸಮುದಾಯದ ಜನರು ಬಾರದೇ ಪ್ರಯಾಸದಿಂದ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ತನಗೆ ರಂಗಸ್ವಾಮಿ, ಸಿದ್ದರಾಜು, ಗಂಗಮ್ಮ, ಮಹಾಲಕ್ಷ್ಮೀ ಎಂಬ 4 ಜನ ಮಕ್ಕಳಿದ್ದಾರೆ. ತಮ್ಮನ್ನು 5 ವರ್ಷಗಳಿಂದ ಗ್ರಾಮದಲ್ಲಿ ಬಹಿಷ್ಕರಿಸಿರುವ ಕಾರಣ ನಾವು ತೋಟದ ಮನೆಯಲ್ಲಿ ಇದ್ದೆವು. ಈಗ ನನ್ನ ಪತಿ ಸಾವನ್ನಪ್ಪಿದ್ದು, ಊರಿನಿಂದ ಯಾರೊಬ್ಬರೂ ಶವ ಸಂಸ್ಕಾರಕ್ಕೆ ಬಂದಿಲ್ಲ ಎಂದು ಮೃತರ ಪತ್ನಿ ಮಹಾದೇವಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ. ನಾಗವಳ್ಳಿ ಗ್ರಾಮದಲ್ಲಿ ಶಾಮಿಯಾನ ಬಾಡಿಗೆಗೆ ಪಡೆಯಲು ಅವಕಾಶ ಮಾಡಿ ಕೊಟ್ಟಿಲ್ಲ, 15 ರಿಂದ 20 ಜನ ಸಂಬಂಧಿಕರನ್ನು ಬಿಟ್ಟರೆ ಗ್ರಾಮಸ್ಥರು ಬಂದಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಠಾಣೆಗೆ ದೂರು: ಈ ಸಂಬಂಧ ಮೃತರ ಕುಟುಂಬ ಚಾಮರಾಜನಗರ ಪೂರ್ವ ಠಾಣೆಗೆ ದೂರು ಕೊಟ್ಟಿದ್ದರು. ದೂರು ಪಡೆದ ಪೊಲೀಸರು ಈ ವಿಷಯವನ್ನು ತಹಶೀಲ್ದಾರ್ ಗಮನಕ್ಕೆ ತಂದಿದ್ದು, ತಹಶೀಲ್ದಾರ್ ವಿಚಾರಿಸಿದಾಗ ತಾವು ಯಾವುದೇ ಸಾಮಾಜಿಕ ಬಹಿಷ್ಕಾರ ಹಾಕಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ. ಅಂತ್ಯಸಂಸ್ಕಾರಕ್ಕೆ ತೆರಳುವುದು ವ್ಯಕ್ತಿಯ ಸ್ವಯಂ ನಿರ್ಧಾರವಾಗಿರುವುದರಿಂದ ಬಲವಂತದಿಂದ ಹೋಗಿ ಎನ್ನಲಾಗಲ್ಲ, ಈ ಸಂಬಂಧ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಚಾಮರಾಜನಗರ ಪೂರ್ವ ಠಾಣೆ ಪಿಐ ಶ್ರೀಕಾಂತ್ ತಿಳಿಸಿದ್ದಾರೆ.