ಗುಂಡ್ಲುಪೇಟೆ (ಚಾಮರಾಜನಗರ) :ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ಕಾರಿ ಪದವಿ ಕಾಲೇಜು ಸ್ಥಳಾಂತರ ಖಂಡಿಸಿ ಶಾಸಕರು ಹಾಗೂ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ತೆರಕಣಾಂಬಿ ಪದವಿ ಕಾಲೇಜು ಸ್ಥಳಾಂತರ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಬಳಿಕ ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ಕಾಲೇಜು ಸ್ಥಳಾಂತರ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಗುಂಡ್ಲುಪೇಟೆ ಸುತ್ತಮುತ್ತಲಿನ ಗ್ರಾಮೀಣ ಭಾಗದ ಹಿಂದುಳಿದ ಹಾಗೂ ಮಹಿಳಾ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಪಟ್ಟಣ ಹಾಗೂ ನಗರ ಪ್ರದೇಶಗಳಿಗೆ ಮಹಿಳಾ ವಿದ್ಯಾರ್ಥಿಗಳನ್ನು ಕಳುಹಿಸಲು ಹಿಂಜರಿಯುತ್ತಿದ್ದಾರೆ.
ಒಂದು ವೇಳೆ ಕಾಲೇಜು ಸ್ಥಳಾಂತರವಾದ್ರೆ, ಅನೇಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕಗೊಳಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕಾಲೇಜು ಉಳಿಸಬೇಕು ಎಂದು ಒತ್ತಾಯಿಸಿದರು.
ಈ ಕಾಲೇಜು ಉಳಿದರೆ ಅನೇಕ ಬಡ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸುತ್ತಾರೆ. ಈ ಬಾರಿ ಅನೇಕ ವಿದ್ಯಾರ್ಥಿಗಳು ಈ ಕಾಲೇಜಿಗೆ ದಾಖಲಾಗುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಸ್ಥಳಾಂತರವಾದ್ರೆ, ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.