ಕೊಳ್ಳೇಗಾಲ: ಪೌರಾಡಳಿತ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರಲ್ಲಿ ಕೊಳ್ಳೇಗಾಲ ನಗರಸಭೆ ಹಾಗೂ ಗ್ರಾಮಾಂತರ ವ್ಯಾಪ್ತಿಯ ಪೌರಕಾರ್ಮಿಕರು ಮತ್ತು ಮುಖಂಡರೊಂದಿಗೆ ಬುಧವಾರ ಚರ್ಚಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಅವರ ತೊಂದರೆ ಏನೆಂಬುದು ಮನವರಿಕೆಯಾಗಿದೆ. ಈ ಬಗ್ಗೆ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳನ್ನು ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಇಲ್ಲಿನ ನಗರಸಭೆಯಲ್ಲಿ 79 ಪೌರ ಕಾರ್ಮಿಕರಿದ್ದಾರೆ. ಅದರಲ್ಲಿ ನೇರಪಾವತಿ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವವರೂ ಇದ್ದಾರೆ.
ಈಗಾಗಲೇ ನೇರ ಪಾವತಿಯ 3 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅನುಕಂಪದ ಆಧಾರದ ಮೇಲೆ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಗುರುತಿಸಿ ನಿರ್ಮಿಸಿಕೊಡುವಂತೆ ಪೌರಕಾರ್ಮಿಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಕ್ರಮ ವಹಿಸುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ. ಪೌರಕಾರ್ಮಿಕರಿಗೆ ಮನೆ ಕೊಡುವ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.